ಬುಧವಾರ, ಏಪ್ರಿಲ್ 1, 2020
19 °C
ಏ.26ರಂದು ಕದರಮಂಡಲಗಿ ದೇವಾಲಯದಲ್ಲಿ ಸಾಮೂಹಿಕ ವಿವಾಹ

’ಸಪ್ತಪದಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಕೋಟಾ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಮುಜರಾಯಿ ಇಲಾಖೆಯಿಂದ ಏಪ್ರಿಲ್‌ 26ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸಲು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವ ಸಿದ್ಧತೆ ಹಾಗೂ ಮುಜರಾಯಿ ಇಲಾಖೆ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗಳು ಈ ವರ್ಷದಲ್ಲಿ ಮದುವೆ ಮಾಡಿಕೊಳ್ಳಲು ಅತ್ಯಂತ ಪ್ರಶಸ್ತವಾದ ಅಕ್ಷಯ ತೃತೀಯ ವೃಷಭ ಹಾಗೂ ಅಭಿಜಿನ್ ಲಗ್ನ ಇರುವುದರಿಂದ ಈ ಶುಭ ಮುಹೂರ್ತವನ್ನು ನಿಗದಿಪಡಿಸಿದ್ದಾರೆ ಎಂದು ಹೇಳಿದರು.

ಎರಡು ಹಂತಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ಸರ್ಕಾರ ದಿನಾಂಕ ನಿಗದಿಪಡಿಸಿದೆ. ಏ.26 ಹಾಗೂ ಮೇ 24 ರಂದು ದಿನಾಂಕ ನಿಗದಿಪಡಿಸಿದೆ. ಹಾವೇರಿ ಜಿಲ್ಲೆಯಲ್ಲಿ ಏ.26ರಂದು ಕದರಮಂಡಲಗಿ ದೇವಾಲಯದಲ್ಲಿ ವಿವಾಹ ಕಾರ್ಯಕ್ರಮ ನಡೆಸಲು ನಿಶ್ಚಯಿಸಲಾಗಿದೆ. ಈ ಕುರಿತಂತೆ ಅರ್ಜಿ ಆಹ್ವಾನ ಹಾಗೂ ಕಾರ್ಯಕ್ರಮದ ಸಿದ್ಧತೆ ಕುರಿತಂತೆ ಅಧಿಕಾರಿಗಳು ಕ್ರಮವಹಿಸಲು ಸೂಚನೆ ನೀಡಿದರು.

ಸಪ್ತಪದಿ ಕಾರ್ಯಕ್ರಮಕ್ಕೆ ಕರಪತ್ರಗಳು, ಬ್ಯಾನರ್‌, ಜಾಹೀರಾತು, ಸಪ್ತಪದಿ ರಥ (ವಾಹನದ ಮೂಲಕ) ಹಾಗೂ ಧ್ವನಿವರ್ಧಕಗಳ ಮೂಲಕ ತಾಲ್ಲೂಕು ಕಚೇರಿಗಳಲ್ಲಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗಳು, ಸಾರ್ವಜನಿಕ ಸಮಾರಂಭ, ಉತ್ಸವ, ಜಾತ್ರೆಗಳಲ್ಲಿ ಪ್ರಚುರಪಡಿಸಬೇಕು. ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಾಲೂಕು ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಸಾಮೂಹಿಕ ವಿವಾಹಕ್ಕೆ ಆಫ್‍ಲೈನ್ ಹಾಗೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್‌ 27ರ ಒಳಗೆ ವಧು– ವರರು ನೋಂದಣಿ ಮಾಡಿಸಿಕೊಳ್ಳಬೇಕು. ವಿವಾಹವಾಗುವ ಜೋಡಿಗಳಿಗೆ ₹40 ಸಾವಿರ ಮೊತ್ತದ 8 ಗ್ರಾಂ ತೂಕದ ಚಿನ್ನದ ತಾಳಿ, ಎರಡು ಚಿನ್ನದ ಗುಂಡು, ವರನಿಗೆ ಶಲ್ಯ, ಪಂಚೆ ಹಾಗೂ ವಧುವಿಗೆ ರೇಷ್ಮೆ ಸೀರೆಯನ್ನು ಕೊಡಲಾಗುವುದು ಎಂದರು. 

ಸಭೆಯಲ್ಲಿ ಶಾಸಕರಾದ ಸಿ.ಎಂ.ಉದಾಸಿ, ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿದ್ಧರಾಜ ಕಲಕೋಟಿ, ವಿರೂಪಾಕ್ಷಪ್ಪ ಕಡ್ಲಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿ.ಪಂ. ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಸಂತೋಷ ಕೊಪ್ಪದ, ಮುಜರಾಯಿ ವಿಭಾಗದ ಶಿರಸ್ತೇದಾರ ಅಮೃತ ಪಾಟೀಲ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು