ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ರಕ್ಷಣೆಯಲ್ಲಿ ಸಮನ್ವಯತೆ ಕೊರತೆ

ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಅಸಮಾಧಾನ
Last Updated 10 ಡಿಸೆಂಬರ್ 2020, 14:58 IST
ಅಕ್ಷರ ಗಾತ್ರ

ಹಾವೇರಿ: ನಾವೆಲ್ಲ ಮಕ್ಕಳ ಹಕ್ಕುಗಳ ರಕ್ಷಣಾ ಸೈನಿಕರು. ಮಕ್ಕಳ ಪಾಲನೆ, ಪೋಷಣೆ, ಹಕ್ಕುಗಳ ರಕ್ಷಣೆ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆಭಾರತಿ ವಾಳ್ವೇಕರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಬಾಲನ್ಯಾಯ ಕಾಯ್ದೆ-2015 ಅನುಷ್ಠಾನ, ಆರ್.ಟಿ.ಇ. ಕಾಯ್ದೆ-2019, ಶಾಲೆಯಿಂದ ಹೊರಗಿರುವ ಮಕ್ಕಳ ದಾಖಲಾತಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಪೋಕ್ಸೊ ಕಾಯ್ದೆ-2012ರ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆ ಮತ್ತು ಪಾಲನೆಗೆ ಕೆಲಸ ಮಾಡುತ್ತಿರುವ ಇಲಾಖೆ ಮತ್ತು ಸಂಸ್ಥೆಗಳ ನಡುವೆ ಪರಸ್ಪರ ಸಮನ್ವಯತೆಯ ಕೊರತೆ ಕಾಣುತ್ತಿದೆ. ಇದನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು ಎಂದರು.

ಕಾರ್ಯಪಡೆ ರಚನೆ

ಸಮಾರಂಭದ ಅಧ್ಯಕ್ಷತೆ ವಹಿಸಿ ಬಾಲ್ಯ ವಿವಾಹ ತಡೆ, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮೊಹಮ್ಮದ್‌ ರೋಶನ್ ಅವರು ಮಕ್ಕಳ ಹಕ್ಕುಗಳ ಕುರಿತಂತೆ ಜಾಗೃತಿ ಹಾಗೂ ಮಕ್ಕಳ ರಕ್ಷಣೆಯ ಕಾರ್ಯದಲ್ಲಿ ಎಲ್ಲ ಭಾಗೀದಾರ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಶೀಘ್ರವೇ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಹೇಳಿದರು.

ಮಕ್ಕಳ ಗ್ರಾಮಸಭೆ

ಮಕ್ಕಳಿಗೆ ಓದುವ ಬೆಳಕು ಯೋಜನೆಯಡಿ ಎಲ್ಲ ಗ್ರಂಥಾಲಯಗಳಲ್ಲಿ ಸದಸ್ಯತ್ವವನ್ನು ನೋಂದಾಯಿಸುವ ಮೂಲಕ ಅವರ ಹಕ್ಕುಗಳ ರಕ್ಷಣೆಯ ಅರಿವು ಮೂಡಿಸಲಾಗುವುದು. ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ನಡೆಸಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿಗಳಾಗಿ ರೂಪಿಸಲಾಗುವುದು. ಪೊಲೀಸ್ ಸಹಕಾರದಿಂದ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಪಡೆ ರಚಿಸಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ‘ಬಾಲಾಪರಾಧಗಳ ವಿಚಾರಣೆಯಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಕಾಳಜಿ ವಹಿಸಿದೆ. ಮಕ್ಕಳ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರದಂತೆ ಎಚ್ಚರ ವಹಿಸಲಾಗಿದೆ. ಇಂತಹ ಮಕ್ಕಳ ವಿಚಾರಣೆ ನಡೆಸುವವರಿಗೆ ವಿಶೇಷ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ 100ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾದ ಜಿಲ್ಲೆಯ 24 ಶಾಲೆಗಳಿಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ತಲಾ ₹5 ಸಾವಿರ ಪ್ರೋತ್ಸಾಹಧನ ನೀಡಲಾಯಿತು. ಶಾಲೆಯ ಮುಖ್ಯ ಶಿಕ್ಷಕರು ಪ್ರೋತ್ಸಾಹಧನದ ಚೆಕ್ ಪಡೆದುಕೊಂಡರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಲ್ಲಿಕಾರ್ಜುನ ಮಠದ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಜೀದ್ ಹಾಗೂ ಸದಸ್ಯರಾದ ಮುತ್ತುರಾಜ ಮಾದರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT