ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.14ರವರೆಗೆ ಕಾನೂನು ಅರಿವು

Last Updated 28 ಸೆಪ್ಟೆಂಬರ್ 2021, 15:08 IST
ಅಕ್ಷರ ಗಾತ್ರ

ಹಾವೇರಿ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಾದ್ಯಂತ ಅ.2ರ ಗಾಂಧಿ ಜಯಂತಿಯಿಂದ ನ.14ರ ಜವಾಹರಲಾಲ್ ನೆಹರು ಜಯಂತಿವರೆಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ಕಾನೂನು ಸೇವಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಯಾದವ ವನಮಾಲಾ ಆನಂದರಾವ್ ತಿಳಿಸಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಕಾನೂನು ಸಪ್ತಾಹ ಕಾರ್ಯಕ್ರಮ ಆಯೋಜನೆ ಕುರಿತಂತೆ ಸೋಮವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಾವೇರಿ ತಾಲ್ಲೂಕಿನ 32 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿಶೇಷ ಉಪನ್ಯಾಸದ ಮೂಲಕ ವಿವಿಧ ಕಾಯ್ದೆಗಳ ಕುರಿತಂತೆ ಜಾಗೃತಿ ಮೂಡಿಸಲು ಎಂಟು ವಕೀಲರ ತಂಡಗಳನ್ನು ರಚಿಸಲಾಗಿದೆ. 32 ವಕೀಲರು ವಿವಿಧ ವಿಷಯಗಳ ಕುರಿತಂತೆ ಹಳ್ಳಿಗಳಿಗೆ ತೆರಳಿ ಜನರಿಗೆ ಮಾಹಿತಿ ನೀಡಲಿದ್ದಾರೆ ಎಂದರು.

ಅ.2ರಂದು ಗಾಂಧಿ ಜಯಂತಿಯಂದು ಹಾವೇರಿ ನಗರದಲ್ಲಿ ಲೋಕ ಅದಾಲತ್‍ನ ಪ್ರಯೋಜನಗಳ ಕುರಿತಂತೆ ಕಾನೂನು ತಿಳಿವಳಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.3ರಂದು ಪೋಕ್ಸೊ ಕಾಯ್ದೆ 2012 ಮತ್ತು ಮಾನವ ಕಳ್ಳಸಾಗಣೆ ತಡೆಗಟ್ಟುವಿಕೆ, ಅ.4ರಂದು ಲಿಂಗತ್ವ ಅಲ್ಪಸಂಖ್ಯಾತರು ಹಕ್ಕುಗಳ ರಕ್ಷಣೆ ಕಾಯ್ದೆ 2019, ಅ.5ರಂದು ವರದಕ್ಷಿಣೆ ನಿಷೇಧಕ್ಕೆ ಪಿಡಬ್ಲ್ಯೂಡಿವಿ ಕಾಯ್ದೆ, ಅ.6ರಂದು ದತ್ತು ಮತ್ತು ನಿರ್ವಹಣೆಗೆ ಸಂಬಂಧಿಸಿದ ಇತ್ತೀಚಿನ ಕಾನೂನುಗಳು, ಅ.7ರಂದು ಆಸ್ತಿ ಮತ್ತು ನೋಂದಣಿಗೆ ಸಂಬಂಧಿಸಿದ ಕಾನೂನು ಹಾಗೂ ಅ.8ರಂದು ಬಾಲ್ಯ ವಿವಾಹ ನಿಷೇಧ ಮತ್ತು ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಗಳ ಕುರಿತು ಅರಿವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನ.9ರಂದು ಕಾನೂನು ಸೇವಾ ದಿನ, ನ.10 ರಿಂದ ನ.13ರವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ನಗರ ಸ್ಥಳೀಯ ಸಂಸ್ಥೆಯಿಂದ ತ್ಯಾಜ್ಯ ನಿರ್ವಹಣೆ, ಒಣ ಹಾಗೂ ಹಸಿ ಕಸ ವಿಂಗಡಣೆ, ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮಗಳ ಕುರಿತು ಮನೆ ಮನೆಗೆ ಜಾಗೃತಿ ಮೂಡಿಸುವ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನ.14ರಂದು ಮಕ್ಕಳ ದಿನಾಚರಣೆಯಂದು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸೋಮಶೇಖರ ಮೆಳ್ಳಳ್ಳಿ, ಡಿಡಿಪಿಯು ಎಚ್.ಉಮೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಕಾರ್ಮಿಕ ಇಲಾಖೆ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT