ಹಾವೇರಿ: ಕೋವಿಡ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿ, ಸುರಕ್ಷತೆಯೊಂದಿಗೆ ಶೈಕ್ಷಣಿಕ ಸಾಧನೆ ಮಾಡಲು ಪೂರಕವಾದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ನಗರದಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ‘ಅಣಕು ಪರೀಕ್ಷೆ’ ನಡೆಸಿತು.
ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಿದ್ದ ಅಣಕು ಪರೀಕ್ಷೆಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷಾ ಕೊಠಡಿಯ ಪ್ರವೇಶ ಮುನ್ನ ಪ್ರತಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಹಾಕಿ, ಥರ್ಮಲ್ ಸ್ಕ್ಯಾನ್ ಮೂಲಕ ದೇಹದ ಉಷ್ಣಾಂಶ ತಪಾಸಣೆ ಮಾಡಲಾಯಿತು. ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿತ್ತು.
ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರ ಪ್ರವೇಶಿಸಿದರು.ವಿದ್ಯಾರ್ಥಿಗಳು ತಂದಿರುವ ಬ್ಯಾಗ್‍ಗಳು ಹಾಗೂ ಮೊಬೈಲ್ ಇರಿಸಲು ಪ್ರತ್ಯೇಕ ಕೌಂಟರ್ ವ್ಯವಸ್ಥೆ, ಅಂತರ ಕಾಯ್ದುಕೊಳ್ಳಲು ಪ್ರತಿ ಆರು ಅಡಿ ಅಂತರದಲ್ಲಿ ಬಾಕ್ಸ್ ವ್ಯವಸ್ಥೆ, ಕೊಠಡಿಯೊಳಗೆ ಪ್ರತಿ ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯಂತೆ ‘ಜಿಗ್‍ಜಾಗ್’ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವ್ಯವಸ್ಥೆ ಕುರಿತಂತೆ ಪರಿಚಯ ಮಾಡಿಕೊಡಲಾಯಿತು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಅವರು ವ್ಯವಸ್ಥೆಯನ್ನು ಪರಿಶೀಲನೆ ನಡೆಸಿ, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ‘ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಯಾವುದೇ ಆತಂಕ ಪಟ್ಟುಕೊಳ್ಳದೇ, ಗೊಂದಲ ಮಾಡಿಕೊಳ್ಳದೇ ಪರೀಕ್ಷೆಯನ್ನು ಬರೆಯಬೇಕು. ಜಿಲ್ಲೆಯಲ್ಲಿ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಮಕ್ಕಳ ಹಾಗೂ ಶಿಕ್ಷಕರ ಸುರಕ್ಷತೆಗೆ ಗರಿಷ್ಠ ಎಚ್ಚರಿಕೆ ವಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ತಹಶೀಲ್ದಾರ್ ಗಿರೀಶ ಸ್ವಾದಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಶಿಕ್ಷಣಾಧಿಕಾರಿ ಶ್ರೀಧರ, ತಾಲ್ಲೂಕು ನೋಡಲ್ ಅಧಿಕಾರಿ ಮಂಜಪ್ಪ, ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.