ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ | ಪ.ಪೂ. ಶಿಕ್ಷಣ ಇಲಾಖೆ ಯಥಾಸ್ಥಿತಿ ಕಾಪಾಡಿ: ಉಪನ್ಯಾಸಕರ ಸಂಘ ಆಗ್ರಹ

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಆಗ್ರಹ
Published 23 ನವೆಂಬರ್ 2023, 15:56 IST
Last Updated 23 ನವೆಂಬರ್ 2023, 15:56 IST
ಅಕ್ಷರ ಗಾತ್ರ

ಹಾವೇರಿ: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಎಂದು ಹೆಸರು ಬದಲಿಸಲಾಗಿದೆ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಪಿಯು ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಕೂಡಲೇ ಕೈಬಿಟ್ಟು ಪದವಿ ಪೂರ್ವ ಶಿಕ್ಷಣ ಇಲಾಖೆ ಎಂಬ ಹೆಸರನ್ನೇ ಹಿಂದಿನಂತೆ ಯಥಾಸ್ಥಿತಿಯಲ್ಲಿಯೇ ಮುಂದುವರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ವಿವಿಧ ಸಂಘಟನೆಗಳಿಂದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘ, ರಾಜ್ಯ ಪ.ಪೂ ಕಾಲೇಜುಗಳ ಬೋಧಕೇತರ ಸಂಘಗಳ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಿ, ಮನವಿ ಮಾಡಿದರು. 

ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿ ಕಾಪಾಡಬೇಕು. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು ಹಿಂತೆಗೆದು ಪುನಃ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿಯೇ ಉಳಿಸುವ ಮೂಲಕ ಶೈಕ್ಷಣಿಕ ವಿಭಾಗ ಮತ್ತು ಪರೀಕ್ಷಾ ವಿಭಾಗಗಳ ನಡುವೆ ಹಳಿತಪ್ಪಿರುವ ಸಮನ್ವಯವನ್ನು ಮರುಸ್ಥಾಪಿಸಬೇಕು. ಅಲ್ಲದೆ, ಕುಸಿಯುತ್ತಿರುವ ಪರೀಕ್ಷಾ ಮೌಲ್ಯ, ಪಾವಿತ್ರತೆಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿದರು. 

ಪ್ರತಿ ಜಿಲ್ಲಾ ಹಂತಗಳಲ್ಲಿ ಇಲಾಖೆಯ ಮೇಲುಸ್ತುವಾರಿ ನಡೆಸುವ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಹೆಚ್ಚುವರಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರಿಗೆ ವಹಿಸಲು ಸರ್ಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಇದರಿಂದ ಸರಾಗವಾಗಿ ನಡೆಯುತ್ತಿರುವ ಇಲಾಖೆಯ ಚಟುವಟಿಕೆಗಳು ಸಂಕೀರ್ಣಗೊಂಡು, ವಿಳಂಬ ನೀತಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. 

ಸರ್ಕಾರವು ಯಾವುದೇ ಶಿಕ್ಷಕರ ಸಂಘಟನೆಗಳ ಜೊತೆಗಾಗಲಿ, ಶಿಕ್ಷಣ ತಜ್ಞರ ಜೊತೆಗಾಗಲಿ ಸಾಧಕ-ಬಾಧಕಗಳನ್ನು ಕುರಿತು ಚರ್ಚೆ, ಸಮಾಲೋಚನೆಗಳನ್ನು ನಡೆಸದೆ ಏಕಾಏಕಿ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿರುವುದು ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕ ನಿರ್ಧಾರವಾಗಿದೆ ಎಂದು ದೂರಿದರು. 

ಮನವಿ ಸಲ್ಲಿಸುವ ವೇಳೆ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಎಸ್. ನಿಸ್ಸಿಮಗೌಡ್ರ, ಕೆ.ಪಿ. ಬ್ಯಾಡಗಿ, ಪ್ರಕಾಶ ಬಾರಕೇರ, ಶಿವಾನಂದ ಬೆನ್ನೂರು, ಪ್ರಾಚಾರ್ಯರಾದ ಆನಂದ ಮುದಕ್ಕಮ್ಮನವರ, ಸಿಂಧೆ, ಅರುಣಕುಮಾರ, ಭೋದಕೇತರ ಸಂಘದ ಪದಾಧಿಕಾರಿಗಳಾದ ಗಂಗಾದರ, ಹರ್ಷಾ ಪಾಟೀಲ, ಬಸವರಾಜ ಮೊರಬದ ಹಾಗೂ ಜಿಲ್ಲೆಯ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT