ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀರಾವರಿ ಯೋಜನೆ ಪೂರ್ಣಗೊಳಿಸಲು ಡಿಕೆಶಿಗೆ ಪತ್ರ: ಬಿ.ಸಿ.ಪಾಟೀಲ

Published 18 ಜೂನ್ 2024, 15:46 IST
Last Updated 18 ಜೂನ್ 2024, 15:46 IST
ಅಕ್ಷರ ಗಾತ್ರ

ಹಿರೇಕೆರೂರು: ಹಿರೇಕೆರೂರು ವಿಧಾನಸಭೆ ಕ್ಷೇತ್ರದಲ್ಲಿ ಕಾರ್ಯಗತವಾಗಿರುವ ಸರ್ವಜ್ಞ ಏತ ನೀರಾವರಿ ಯೋಜನೆ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳಿಸದಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಪತ್ರ ಬರೆಯಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿರೇಕೆರೂರು ವಿಧಾನಸಭೆ ಕ್ಷೇತ್ರಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಸರ್ವಜ್ಞ ಏತ ನೀರಾವರಿ ಯೋಜನೆಗಳು ಮಂಜೂರು ಆಗಿದ್ದವು. ಆದರೆ ಕಾಮಗಾರಿಗಳು ಪೂರ್ಣಗೊಳ್ಳದೇ ನಿರ್ಲಕ್ಷ್ಯಕ್ಕೊಳಗಾಗಿ ಅರ್ಧಕ್ಕೆ ನಿಂತಿವೆ. ಶೀಘ್ರವೇ ಯೋಜನೆಗಳನ್ನು ಪೂರ್ಣಗೊಳಿಸಿ ತಾಲ್ಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕು’ ಎಂದರು.

‘ಹಿರೇಕೆರೂರು ತಾಲ್ಲೂಕಿಗೆ 2019-20ರಲ್ಲಿ 95 ಕೆರೆ ತುಂಬಿಸುವಂತಹ ₹ 185 ಕೋಟಿ ವೆಚ್ಚದ ಸರ್ವಜ್ಞ ಏತ ನೀರಾವರಿ ಯೋಜನೆ ಮಂಜೂರಾಗಿ ಕೆಲಸ ಆರಂಭವಾಗಿದೆ. 2023ರಲ್ಲಿ ಈ ಯೋಜನೆಯನ್ನು ಮುಕ್ತಾಯಗೊಳಿಸಿ ಕೆರೆ ತುಂಬಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರೂ ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. 2023-24ರಲ್ಲಿ ಬರಗಾಲ ಬಂದಿದ್ದರೂ ಈ ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿದ್ದರೆ ರೈತರು ನೆಮ್ಮದಿಯಿಂದ ಬದುಕುತ್ತಿದ್ದರು. ಆದರೆ ಸರ್ಕಾರದ ವಿಳಂಬ ಧೋರಣೆಯಿಂದ ಇದು ಈವರೆಗೂ ಪೂರ್ಣಗೊಂಡಿಲ್ಲ. ಈ ವರ್ಷವೂ ಇದರಿಂದ ರೈತರಿಗೆ ಬಹಳಷ್ಟು ಅನಾನುಕೂಲವಾಗುತ್ತದೆ. ಮಡ್ಲೂರು, ಗುಡ್ಡದಮಾದಾಪುರ, ದುರ್ಗಾದೇವಿ ಕೆರೆತುಂಬಿಸುವ ಯೋಜನೆ, ಉಡುಗುಣಿ, ಆಣೂರು ಕೆರೆ ತುಂಬಿಸುವ ಯೋಜನೆಗಳು ಪೂರ್ಣಗೊಂಡು ಲೋಕಾರ್ಪಣೆ ಆಗಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕೆರೆಗಳಿಗೆ ನೀರನ್ನು ತುಂಬಿಸಲಾಗುತ್ತಿಲ್ಲ. ಇದು ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎನ್ನುವಂತಾಗಿದೆ. ಕೂಡಲೇ ಸರ್ವಜ್ಞ ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕು. ಈ ಯೋಜನೆ ಸೇರಿದಂತೆ ಉಳಿದ ಯೋಜನೆಗಳ ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಬೇಕು. ಇಲ್ಲವಾದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘2022-23ನೇ ಸಾಲಿನ ಹಿರೇಕೆರೂರು ತಾಲ್ಲೂಕಿನ 96 ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ಕುಡಿಯುವ ನೀರನ್ನು ಪೂರೈಸುವ ಬಗ್ಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಆರಂಭವಾಗಿದ್ದು ಇದುವರೆಗೂ ಮುಕ್ತಾಯವಾಗಿರುವುದಿಲ್ಲ. ತಾಲ್ಲೂಕಿನಲ್ಲಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚು ಇರುವುದರಿಂದ ಕಾಯಿಲೆಗಳು ಹೆಚ್ಚಾಗಿವೆ. ಕೂಡಲೇ ಈ ಯೋಜನೆ ಪೂರ್ಣಗೊಳಿಸಿ ಕುಡಿಯುವ ನೀರಿನ ಸೌಲಭ್ಯ ಮಾಡಿಕೊಡಬೇಕು. ಮೂರು ತಿಂಗಳ ಒಳಗೆ ಯೋಜನೆ ಪೂರ್ಣಗೊಳ್ಳದೇ ಹೋದರೆ ಹೋರಾಟ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT