ಗುರುವಾರ , ಸೆಪ್ಟೆಂಬರ್ 23, 2021
20 °C
ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಜನ ಜಾಗೃತಿ ಕಾರ್ಯಕ್ರಮ: ಉಪವಿಭಾಗಾಧಿಕಾರಿ ಅನ್ನಪೂರ್ಣ ಹೇಳಿಕೆ

ಪೋಷಣ ಅಭಿಯಾನದಿಂದ ಅಪೌಷ್ಟಿಕತೆ ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಭಾರತ ಸರ್ಕಾರದ ವತಿಯಿಂದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ ಅಭಿಯಾನ ಕಾರ್ಯಕ್ರಮಗಳು ಜಾರಿಗೆ ಬಂದ ನಂತರ ತೀವ್ರ ಹಾಗೂ ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಸಂಖ್ಯೆ ಇಳಿಮುಖವಾಗಿದೆ ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಎನ್. ಮುದಕಮ್ಮನವರ ಹೇಳಿದರು.

ಧಾರವಾಡ ಕೇಂದ್ರ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಶಿಗ್ಗಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಆರೋಗ್ಯ ಇಲಾಖೆ ಹಾಗೂ ದುಂಡಶಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ದುಂಡಶಿ ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕುರಿತು ಜನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಪೌಷ್ಟಿಕತೆ ಸಮಸ್ಯೆಯನ್ನು ನಿವಾರಿಸಲು ಹೆಚ್ಚಿನ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಗಳು ಸಾರ್ವಜನಿಕರಿಗೆ ನೀಡಬೇಕು. ಮಹಿಳೆಯರು, ಮಕ್ಕಳು ಹಾಗೂ ಕುಟುಂಬ ಸದಸ್ಯರು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯವಂತರಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಅಗತ್ಯ ಪೌಷ್ಟಿಕಾಂಶಗಳುಳ್ಳ ಆಹಾರ ಸೇವಿಸದ ಕಾರಣ ಅವರಲ್ಲಿ ರಕ್ತಹೀನತೆ ಹಾಗೂ ಇನ್ನಿತರ ಸಮಸ್ಯೆಗಳು ಕಾಡುತ್ತಿವೆ. ರಾಜ್ಯದ ಎಲ್ಲ ಪ್ರದೇಶಗಳಲ್ಲಿ ಪೌಷ್ಟಿಕ ಆಹಾರ ಕುರಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ದುಂಡಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ವಿಜಯಾ ಪಾಟೀಲ ಮಾತನಾಡಿ, ತಾಯಿ ಮತ್ತು ಮಗುವಿನ ಸಮಗ್ರ ಬೆಳವಣಿಗೆಗೆ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ’ ಎಂದರು.

ದುಂಡಶಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸಸಿ ನೆಡುವ ಮೂಲಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಣ್ಣ ಚಂ.ಮಹಾಜನಶೆಟ್ಟರ ಹಾಗೂ ಉಪವಿಭಾಗಾಧಿಕಾರಿ ಅನ್ನಪೂರ್ಣ ಎನ್.ಎಂ. ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರ್ಕಾಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೀತಾ ವಾಡಕರ ಮಾತನಾಡಿದರು.

ಆರು ತಿಂಗಳ ಕಾಲ ಸ್ತನ್ಯಪಾನ ಮಾಡಿ ಏಳನೇ ತಿಂಗಳಿಗೆ ಪಾದಾರ್ಪಣೆ ಮಾಡಿದ್ದ ಶಿಶುಗಳಿಗೆ ಅನ್ನ-ಪ್ರಾಶನ ಮಾಡಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ, ಪೂರ್ಣಿಮಾ ವಿ. ಮತ್ತು ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಹಿಳಾ ಸಂಘದ ಸದಸ್ಯರು ಇದ್ದರು. 

ಕ್ಷೇತ್ರ ಪ್ರಚಾರ ಅಧಿಕಾರಿ, ಶೃತಿ ಎಸ್.ಟಿ. ಪ್ರಾಸ್ತವಿಕವಾಗಿ ಮಾತನಾಡಿದರು. ಜಯಶ್ರೀ ಕಾವಲಕೊಪ್ಪ ಸ್ವಾಗತಿಸಿದರು, ಮುರಳಿಧರ ಕಾರಬಾರಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀಬಾಯಿ ಬಗಾಡೆ ವಂದಿಸಿದರು.

ಕಾರ್ಯಕ್ರಮಕ್ಕೆ ಮೊದಲು ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಪೌಷ್ಟಿಕ ಆಹಾರ ತಯಾರಿಕೆ ಸ್ಪರ್ಧೆ ಮತ್ತು ವಿವಿಧ ಗ್ರಾಮೀಣ ಮತ್ತು ಆರೋಗ್ಯವಂತ ಮಕ್ಕಳ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.