ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಪಕವಾಗಿ ಬರ ನಿರ್ವಹಣೆ ಮಾಡಿ: ಶಾಸಕ ಶ್ರೀನಿವಾಸ ಮಾನೆ

Published 14 ಅಕ್ಟೋಬರ್ 2023, 13:06 IST
Last Updated 14 ಅಕ್ಟೋಬರ್ 2023, 13:06 IST
ಅಕ್ಷರ ಗಾತ್ರ

ಹಾನಗಲ್: ಮಳೆಯ ಕೊರತೆ ತಾಲ್ಲೂಕನ್ನು ತೀವ್ರ ಸಂಕಷ್ಟಕ್ಕೆ ನೂಕಿದೆ. ನೀರು ಮತ್ತು ವಿದ್ಯುತ್‌ ಹಿತ–ಮಿತ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಬೇಕಿದೆ. ಸಮರ್ಪಕವಾಗಿ ಬರ ನಿರ್ವಹಣೆ ಮಾಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಂದಿನ ದಿನಗಳು ಸವಾಲಿನಿಂದ ಕೂಡಿರಲಿವೆ. ಈಗಾಗಲೇ ವಿದ್ಯುತ್ ಉತ್ಪಾದನೆಯ ಮೇಲೆ ದುಷ್ಪರಿಣಾಮ ಬೀರಿದೆ. ಬೇಸಿಗೆಗೂ ಮೊದಲೇ ನೀರಿನ ಅಭಾವ ತಲೆದೋರುವ ಸಾಧ್ಯತೆ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಳೆಯ ಕೊರತೆ ವಿದ್ಯುತ್ ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡಿದ್ದು, ವಿದ್ಯುತ್ ಕ್ಷಾಮ ಈಗಲೇ ತಲೆದೋರಿದೆ. ಶೇ. 40ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಅವಶ್ಯಕತೆಗೆ ತಕ್ಕಂತೆ ವಿದ್ಯುತ್ ಬಳಸಬೇಕಿದೆ. ಅಂತರ್ಜಲದ ಸಂರಕ್ಷಣೆ, ನೀರಿನ ಅಪವ್ಯಯ ತಡೆಗೆ ಮುಂದಾಗಬೇಕಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ, ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಈ ವಿಷಯದಲ್ಲಿ
ನಿಷ್ಕಾಳಜಿ ಬೇಡ ಎಂದು ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಕಾರ್ಮಿಕರ ಮಿತಿ ಹೆಚ್ಚಿಸಬೇಕು.  ಈ ಮೂಲಕ ಕಾರ್ಮಿಕರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬೇಕು. ಜನಸಾಮಾನ್ಯರಿಗೆ ಅನುಕೂಲವಾಗಲು ಹಾನಗಲ್ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸವಣೂರು ಉಪ ವಿಭಾಗಾಧಿಕಾರಿ ಮಹ್ಮದ್ ಖಿಜರ್, ತಹಶೀಲ್ದಾರ್ ರವಿಕುಮಾರ ಕೊರವರ, ತಾಲ್ಲೂಕು ಪಂಚಾಯ್ತಿ ಇಒ ದೇವರಾಜ, ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸಿ.ಎಸ್.ನೆಗಳೂರ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎಇಇ ಪ್ರಹ್ಲಾದ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT