ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ

ನೋಂದಾಯಿತ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಿಂದ ಹೊರಗುಳಿಯದಂತೆ ಕ್ರಮ: ಡಿಡಿಪಿಐ
Last Updated 12 ಜುಲೈ 2021, 13:27 IST
ಅಕ್ಷರ ಗಾತ್ರ

ಹಾವೇರಿ: ‘ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಯಾವುದೇ ವಿದ್ಯಾರ್ಥಿಯು ಪರೀಕ್ಷೆಯಿಂದ ಹೊರಗುಳಿಯಬಾರದು. ಆಯಾ ಶಾಲಾ ಮುಖ್ಯಸ್ಥರು ಮಕ್ಕಳಿಗೆ ಸರಿಯಾದ ಮಾಹಿತಿ ನೀಡಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು’ ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ಹೇಳಿದರು.

ಜಿಲ್ಲಾ ಗುರುಭವನದಲ್ಲಿ ಸೋಮವಾರ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ನಡೆಸುವ ಸಂಬಂಧ ಶಿಕ್ಷಣ ಇಲಾಖಾ ಅಧಿಕಾರಿಗಳಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕರೋನಾದಂತಹ ಸಂದಿಗ್ಧ ಸಂದರ್ಭದಲ್ಲಿ ಕಳೆದ ಬಾರಿ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದೇವೆ. ಈ ಬಾರಿಯೂ ಕೋವಿಡ್ ಮಾರ್ಗಸೂಚಿ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಬೇಕಾಗಿದೆ. ಮಕ್ಕಳ ಗರಿಷ್ಠ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿದೆ. ಕಳೆದ ಬಾರಿಯಂತೆ ಯಶಸ್ವಿಯಾಗಿ ಸುರಕ್ಷಾ ಮಾನದಂಡವನ್ನು ಅನುಸರಿಸಿ ಮಕ್ಕಳ ರಕ್ಷಣೆಯೊಂದಿಗೆ ಈ ವರ್ಷದ ವಾರ್ಷಿಕ ಪರೀಕ್ಷೆಗೆ ನಾವು ಸಿದ್ಧರಾಗಬೇಕಾಗಿದೆ ಎಂದು ಹೇಳಿದರು.

ಕೊಠಡಿಯಲ್ಲಿ ಅಂತರ ಕಾಯ್ದುಕೊಳ್ಳಲು ಕಳೆದ ವರ್ಷಕ್ಕಿಂತ ಈ ವರ್ಷ 16 ಪರೀಕ್ಷಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ವ್ಯವಸ್ಥೆ ಮಾಡಲಾಗಿದೆ. ಹಾವೇರಿ ತಾಲ್ಲೂಕಿನಲ್ಲಿ ಒಟ್ಟು 4,191 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ತಾಲ್ಲೂಕಿನಲ್ಲಿ 29 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. 791 ಪರೀಕ್ಷಾ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಬೇರೆ ಜಿಲ್ಲೆಯ 136 ವಿದ್ಯಾರ್ಥಿಗಳು ತಾಲ್ಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ‘ಸಹಾಯವಾಣಿ ಕೇಂದ್ರ’ (ಹೆಲ್ಪ್‌ ಡೆಸ್ಕ್‌) ಸ್ಥಾಪಿಸಲಾಗುವುದು. ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೆಸರ್, ವ್ಯಾಕ್ಸಿನೇಷನ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಆರಂಭದಿಂದ ಅಂತ್ಯದವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಗುಂಪು ಗೂಡುವಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಒಂದು ಡೆಸ್ಕಿಗೆ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಕೂರಿಸಲಾಗುವುದು. ನೆಗಡಿ, ಜ್ವರ, ಕೆಮ್ಮಿನ ಲಕ್ಷಣಗಳು ಕಂಡು ಬಂದರೆ, 94ಕ್ಕಿಂತ ಕಡಿಮೆ ‘ಆಮ್ಲಜನಕ ಮಟ್ಟ’ ಹೊಂದಿದ್ದರೆ ಇಂತಹ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್‌ ವಿತರಿಸಲಾಗುವುದು. ಅತ್ಯಂತ ವ್ಯವಸ್ಥಿತವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು ನಿಯೋಜಿತ ಕೆಲಸವನ್ನು ನಿರ್ವಹಿಸುವಂತೆ ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಇಚ್ಚಂಗಿ, ಸಂಪನ್ಮೂಲ ವ್ಯಕ್ತಿಗಳಾದ ಎನ್.ಐ. ಹಂಚಿನಾಳ, ಎಂ.ಎಸ್.ಗುಂಡಪಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT