ಸೋಮವಾರ, ಸೆಪ್ಟೆಂಬರ್ 20, 2021
21 °C

ಎಪಿಎಂಸಿ ಅಭಿವೃದ್ಧಿಗೆ ಅಗತ್ಯ ಕ್ರಮ: ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಎಪಿಎಂಸಿಯಿಂದ ನಿರ್ಮಿಸಿರುವ ಈ ಗೋದಾಮು ವಿಸ್ತಾರವಾಗಿದ್ದು, ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದವರು ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ರೈತರಿಗೆ ಅನುಕೂಲ ಕಲ್ಪಿಸಬೇಕು’ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲ್ಲೂಕಿನ ದೇವಿಹೊಸೂರ ಗ್ರಾಮದ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಆವರಣದಲ್ಲಿ 2014-15ನೇ ಸಾಲಿನ ನಬಾರ್ಡ್ ಸಂಸ್ಥೆಯ ಡಬ್ಲ್ಯೂಐಎಫ್‌ ಯೋಜನೆಯಡಿ ಎಪಿಎಂಸಿಗೆ ಮಂಜೂರಾದ ಅನುದಾನದಲ್ಲಿ ನಿರ್ಮಿಸಿದ 1 ಸಾವಿರ ಮೆ.ಟನ್ ಸಾಮರ್ಥ್ಯದ ಗೋದಾಮನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಪಿಎಂಸಿಯ ಅಭಿವೃದ್ಧಿ ಕುರಿತು ಅಧ್ಯಕ್ಷರು ವಿವಿಧ ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಮಾತನಾಡಿ, ‘1955ರಲ್ಲಿಯೇ ಆರಂಭಗೊಂಡಿರುವ ಹಾವೇರಿ ಎಪಿಎಂಸಿಯು 37.11 ಎಕರೆ ವಿಸ್ತೀರ್ಣ ಹೊಂದಿದೆ. ಜಿಲ್ಲಾ ಕೇಂದ್ರವಾಗಿರುವುದರಿಂದ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರೈತರ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿವೆ. ಮಾರುಕಟ್ಟೆಯಲ್ಲಿ ರೈತರ, ವ್ಯಾಪಾರಸ್ಥರ ಅಗತ್ಯಗಳನ್ನು ಸಮರ್ಥವಾಗಿ ಪೂರೈಸಲು ಪ್ರಸ್ತುತ ಮಾರುಕಟ್ಟೆಯಲ್ಲಿ ಕಷ್ಟಕರವಾಗಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿಯೇ ಅತಿದೊಡ್ಡ ಜಾನುವಾರು ಸಂತೆಯೂ ಇಲ್ಲಿ ನಡೆಯುತ್ತದೆ. ಇದನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಮಾರುಕಟ್ಟೆಯಿಂದ ಬರುವ ಶುಲ್ಕ ಮತ್ತು ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಗಳಿಂದ ಅಭಿವೃದ್ಧಿ ಪಡಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಹೀಗಾಗಿ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ₹29.81 ಕೋಟಿ ಅನುದಾನದ ಯೋಜನೆಯನ್ನು ರೂಪಿಸಲಾಗಿದೆ. ಅದನ್ನು ಕೇಂದ್ರ, ರಾಜ್ಯ ಸರ್ಕಾರಗಳಿಂದ ಮಂಜೂರು ಮಾಡಿಸಬೇಕು ಎಂದು ಶಾಸಕರಿಗೆ ವಿನಂತಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು