ರಾಣೆಬೆನ್ನೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹಾವೇರಿ ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗದಿರುವುದು ಬಹಳಷ್ಟು ನೋವುಂಟು ಮಾಡಿದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಬೇಸರ ವ್ಯಕ್ತಪಡಿಸಿದರು.
ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕೊನೆಯ ಹಂತದವರೆಗೂ ನನಗಾಗಲಿ ಅಥವಾ ರುದ್ರಪ್ಪ ಲಮಾಣಿ ಅವರಿಗಾಗಲಿ ಸಚಿವ ಸ್ಥಾನ ದೊರೆಯುತ್ತದೆ ಎಂಬ ಆಶಾಭಾವನೆ ಇತ್ತು. ಆದರೆ ಅದು ನಿರಾಸೆಯಾಗಿದ್ದು, ಜಿಲ್ಲೆಯ ಜನರಿಗೂ ನೋವಾಗಿದೆ ಎಂದರು.
ಈ ಹಿಂದೆಯೂ ಕಾಂಗ್ರೆಸ್ ಆಡಳಿತದಲ್ಲಿ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ದೊರೆತಿರಲಿಲ್ಲ. ನನಗೆ ಸಚಿವ ಸ್ಥಾನ ದೊರೆಯದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಮಾನಗಳಲ್ಲಿ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯುತ್ತದೆ ಎಂಬ ಭರವಸೆ ನನಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.