ಗುರುವಾರ , ಆಗಸ್ಟ್ 11, 2022
26 °C

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ: ‘ಕೊಟ್ಟ ಮಾತಿನಂತೆ ನಡೆದುಕೊಳ್ಳದ ಸಿಎಂ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಜೂನ್ 27ರಂದು ಶಿಗ್ಗಾವಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಬೊಮ್ಮಾಯಿ ಅವರು ನೀಡಿದ ಭರವಸೆ ನಂಬಿಕೊಂಡು ಈಗಾಗಲೇ ಮೂರು ಬಾರಿ ಕಾಲಾವಕಾಶ ನೀಡಿದ್ದರೂ ಇದುವರೆಗೆ ಮೀಸಲಾತಿ ನೀಡುವ ಕುರಿತು ಸ್ಪಷ್ಟವಾಗಿ ಹೇಳುತ್ತಿಲ್ಲ. ಅವರು ಸಮಾಜಕ್ಕೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜದ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದ ಹಿನ್ನೆಲೆ ಮತ್ತೇ ಹೋರಾಟ ಆರಂಭಿಸಿದ್ದು, ಈ ಬಾರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಶಿಗ್ಗಾವಿ ಪಟ್ಟಣದ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಸತ್ಯಾಗ್ರಹ ನಡೆಸುವ ಮೂಲಕ ಈ ಹೋರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜೂನ್‌ 27ರ ಒಳಗಾಗಿ ಮೀಸಲಾತಿ ನೀಡುವ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದರು.

ಸಮೀಕ್ಷೆ ಸ್ವಾಗತಾರ್ಹ: ನಿರಂತರ ಹೋರಾಟದ ಫಲವಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪಂಚಮಸಾಲಿ ಸಮಾಜದ ಸಮೀಕ್ಷೆ ಕೈಗೊಂಡಿರುವುದು ಸ್ವಾಗತಾರ್ಹ. ಸಮೀಕ್ಷೆಗೆ ಆಗಮಿಸಿದ ವೇಳೆ ಸಮಾಜದ ಬಾಂಧವರು ಕೇವಲ ಲಿಂಗಾಯತ, ವೀರಶೈವ ಎಂದು ಅಷ್ಟೇ ಹೇಳದೆ ಒಳಪಂಗಡವನ್ನು ಸ್ಪಷ್ಟವಾಗಿ ಹೇಳಬೇಕು ಎಂದರು.

ಪಂಚಮಸಾಲಿ ಸಮಾಜದ ಪ್ರಮುಖರಾದ ಸಿ.ಆರ್.ಬಳ್ಳಾರಿ, ಮಾಜಿ ಶಾಸಕ ಶಿವಶಂಕರ, ಬಸವರಾಜ ಹಾಲಪ್ಪನವರ, ನಾಗೇಂದ್ರ ಕಟಕೋಳ, ವೀರೇಶ ಮತ್ತಿಹಳ್ಳಿ, ಶಿವಲಿಂಗಪ್ಪ ಸಾತೇನಹಳ್ಳಿ, ಶಂಭಣ್ಣ ದೇವರಗುಡ್ಡ, ಪರಮೇಶ್ವರಗೌಡ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು