ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: 'ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ’

ತಹಶೀಲ್ದಾರ್‌ ಕಚೇರಿ ಎದುರು ಧರಣಿ
Last Updated 5 ಮೇ 2022, 14:21 IST
ಅಕ್ಷರ ಗಾತ್ರ

ಹಾವೇರಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2ಎ ಮೀಸಲಾತಿ ಹಾಗೂ ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಗುರುವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಈಗಾಗಲೇ 4 ಹಂತಗಳ ಹೋರಾಟಗಳು ನಡೆದಿದ್ದು, ಸರ್ಕಾರ ನಮ್ಮ ಸಮಾಜದ ಬೇಡಿಕೆಗೆ ಸ್ಪಂದಿಸದೇ ಇರುವುದರಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ 5ನೇ ಹಂತದ ಹೋರಾಟ ನಡೆಸಲಾಗುತ್ತಿದೆ ಎಂದು ಸಮಾಜದ ಮುಖಂಡರು ಹೇಳಿದರು.

ಪಂಚಮಸಾಲಿ ಸಮಾಜ ಸುಮಾರು ಒಂದು ಕೋಟಿ ಜನಸಂಖ್ಯೆ ಹೊಂದಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಕುಟುಂಬಗಳಿವೆ. ಹಿಂದಿನಿಂದಲೂ ಪಂಚಮಸಾಲಿ ಸಮಾಜದ ಜನರು ಹಾಗೂ ಮಕ್ಕಳಿಗೆ ಯಾವುದೇ ಶೈಕ್ಷಣಿಕ ಸೌಲಭ್ಯಗಳು ದೊರಕದೇ ನಮ್ಮ ಸಮಾಜಕ್ಕೆ ಅನ್ಯಾಯವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆದಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಭರವಸೆ ನೀಡಿದ್ದಾರೆ. ಆದರೆ ಕುಲ ಅಧ್ಯಯನ ನೆಪದಲ್ಲಿ ಹಾರಿಕೆ ಉತ್ತರ ನೀಡಿ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ದೂರಿದರು.

ಈ ಕೂಡಲೇ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ ಕೊಟ್ಟ ಮಾತಿನಂತೆ 2ಎ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸರ್ಕಾರ ಇದಕ್ಕೂ ಸ್ಪಂದಿಸದಿದ್ದರೇ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಬಸವರಾಜ ಹಾಲಪ್ಪನವರ, ನಾಗೇಂದ್ರ ಕಟಕೋಳ, ಉಳಿವೆಪ್ಪ ಹಲಗಣ್ಣನವರ, ಶಂಕರ ಬಿಸಲಳ್ಳಿ, ಸದಾನಂದ ಹಾದಿಮನಿ, ರಮೇಶ ಕೆಂಗೊಂಡ, ಮಮತಾ ಜಾಬಿನ್, ನಂಜುಂಡೇಶ ಕಳ್ಳೇರ, ಪ್ರಭು ಬಿಷ್ಟಣ್ಣನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT