ಮಂಗಳವಾರ, ಮೇ 17, 2022
26 °C
ಹಾವೇರಿ-ಬ್ಯಾಡಗಿ-ಹಾನಗಲ್‍ನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಮುಕ್ತ ಹಾಗೂ ಪಾರದರ್ಶಕ ಮತದಾನ ಪ್ರಕ್ರಿಯೆಗೆ ಮತಗಟ್ಟೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ. ಆಯೋಗದ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಲಹೆ ನೀಡಿದರು.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಹಾವೇರಿ, ಬ್ಯಾಡಗಿ ಹಾಗೂ ಹಾನಗಲ್‍ನಲ್ಲಿ ಆಯೋಜಿಸಿದ್ದ ಮತಗಟ್ಟೆ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ಮೊದಲ ಸುತ್ತಿನ ಚುನಾವಣಾ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಅವರು ತರಬೇತಿಗೆ ನಿಯೋಜಿತ ಸಿಬ್ಬಂದಿ ಉದ್ದೇಶಿಸಿ ಮಾತನಾಡಿದರು.

ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಾಗಿ ನಿಯೋಜಿತಗೊಂಡಿರುವ ತಾವು ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಚುನಾವಣಾ ಆಯೋಗದ ಕಾಲಕಾಲದ ನಿಯಮಾವಳಿಗಳನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು. ಯಾವುದೇ ಸಂಶಯಗಳು ಉಂಟಾದರೆ ತರಬೇತಿ ಅವಧಿಯಲ್ಲಿ ಸ್ಪಷ್ಟಪಡಿಸಿಕೊಳ್ಳಬೇಕು. ಯಾವುದೇ ಗೊಂದಲ ಹಾಗೂ ತಪ್ಪುಗಳು ಇಲ್ಲದಂತೆ ಅತ್ಯಂತ ನಿಖರವಾಗಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿ, ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುವವರಿಗೆ ಚುನಾವಣಾ ಆಯೋಗದ ಮಾರ್ಗಸೂಚಿಗಳ ಸ್ಪಷ್ಟ ಅರಿವಿರಬೇಕು. ಇವಿಎಂ ಮತ್ತು ವಿವಿಪ್ಯಾಟ್‍ಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕು.

ಗಂಡು ಮತ್ತು ಹೆಣ್ಣು ಮತದಾರರ ಅಂಕಿಸಂಖ್ಯೆ ದಾಖಲಿಸಬೇಕು. ಕಂಟ್ರೋಲ್ ಯುನಿಟ್‍ದಲ್ಲಿ ತಪ್ಪು ಸಂದೇಶ ಬಂದಲ್ಲಿ ತಕ್ಷಣ ಪಿಆರ್‌ಒ ಗಮನಕ್ಕೆ ತರಬೇಕು ಎಂದು ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದರು. ನೀವು ನೀಡಿದ ದಾಖಲಾತಿಗಳು ಹಾಗೂ ಮಶಿನ್‍ನಲ್ಲಿರುವ ದಾಖಲಾತಿಗಳು ಸರಿಯಾಗಿರಬೇಕು. ನಿಖರ ಹಾಗೂ ಸ್ಪಷ್ಟ ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪಾದಲ್ಲಿ ನೇರವಾಗಿ ನೀವೆ ಹೊಣೆಯಾಗಿರುತ್ತೀರಿ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಚುನಾವಣಾ ತರಬೇತಿಯ ನೋಡಲ್ ಅಧಿಕಾರಿಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂದಾನಪ್ಪ ವಡಗೇರಿ, ತಹಶೀಲ್ದಾರ್‌ ಗಿರೀಶ ಸ್ವಾದಿ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಸವಣೂರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ, ಕೃಷಿ ಇಲಾಖೆಯ ಉಪನಿರ್ದೇಶಕ ಕರಿಯಲ್ಲಪ್ಪ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.