ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಪಲ್ಸ್ ಪೋಲಿಯೊ ಮಾರ್ಚ್ 3ರಂದು

ಯಾವುದೇ ಮಗು ಲಸಿಕೆಯಿಂದ ಹೊರಗುಳಿಯಂತೆ ಕ್ರಮ ಕೈಗೊಳ್ಳಿ: ಡಿಸಿ ಸೂಚನೆ
Published 28 ಫೆಬ್ರುವರಿ 2024, 7:29 IST
Last Updated 28 ಫೆಬ್ರುವರಿ 2024, 7:29 IST
ಅಕ್ಷರ ಗಾತ್ರ

ಹಾವೇರಿ: ‘ಪಲ್ಸ್ ಪೋಲಿಯೊ ಕಾರ್ಯಕ್ರಮ ಜಿಲ್ಲೆಯಾದ್ಯಂತ ಮಾರ್ಚ್ 3ರಂದು ಜರುಗಲಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಲಸಿಕಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪೋಲಿಯೊ ಕಾರ್ಯಕ್ರಮಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ವಿಶೇಷವಾಗಿ ಕಾಳಜಿವಹಿಸಿ ಕೊಳಚೆ ಪ್ರದೇಶ, ಹೆಚ್ಚು ಅಪಾಯಕಾರಿ ಪ್ರದೇಶ, ಅನಾಥಾಶ್ರಮ, ವಲಸೆ ಕಾರ್ಮಿಕರ ಮಕ್ಕಳು ಪೋಲಿಯೊ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಸಲಹೆ ನೀಡಿದರು.

‘ಪೋಲಿಯೊ ಕಾರ್ಯಕ್ರಮದ ಕುರಿತು ಶಾಲಾ ಮಕ್ಕಳಿಂದ ಪ್ರಭಾತ್‌ಪೇರಿ ಆಯೋಜಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಸದ ವಾಹನಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಹೆಸ್ಕಾಂ, ಸ್ಥಳೀಯ ನಗರ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಲಸಿಕೆ ಕಾರ್ಯಕ್ರಮ ನಡೆಯುವ ಸಮಯದಲ್ಲಿ ಲಸಿಕೆ ಸುರಕ್ಷಿತವಾಗಿಡಲು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು’ ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿಯ ಸರ್ವಲೆನ್ಸ್ ಮೆಡಿಕಲ್ ಆಫೀಸರ್ ಸಿದ್ಧಲಿಂಗಯ್ಯ ಅವರು ಪೋಲಿಯೊ ಕಾರ್ಯಕ್ರಮದ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಪಿ.ಆರ್‌. ಹಾವನೂರ, ಡಾ.ನೀಲೇಶ, ಡಾ.ಜಗದೀಶ, ಡಾ.ವಿರಕ್ತಿಮಠ, ಡಾ.ಸರಿತಾ, ತಾಲ್ಲೂಕು ಆರೋಗ್ಯಾಧಿಕಾರಿ ಪ್ರಭಾಕರ ಕುಂದೂರ, ವಿವಿಧ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು, ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.

ಹಾವೇರಿ ಜಿಲ್ಲೆಯಲ್ಲಿ ಬಸ್ ನಿಲ್ದಾಣ ರೈಲು ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ತಾಲ್ಲೂಕು ಆಸ್ಪತ್ರೆ ಪಿಎಚ್‍ಸಿ ಸೇರಿದಂತೆ ಒಟ್ಟು 1004 ಬೂತ್‍ಗಳನ್ನು ಸ್ಥಾಪಿಸಲಾಗಿದೆ
–ಡಾ.ಜಯಾನಂದ, ಜಿಲ್ಲಾ ಆರ್‌.ಸಿ.ಎಚ್‌. ಅಧಿಕಾರಿ ಹಾವೇರಿ

‘1.70 ಲಕ್ಷ ಮಕ್ಕಳಿಗೆ ಲಸಿಕೆಯ ಗುರಿ’

‘ಜಿಲ್ಲೆಯಲ್ಲಿ 170168 ಐದು ವರ್ಷದೊಳಗಿನ ಮಕ್ಕಳನ್ನು ಗುರುತಿಸಲಾಗಿದೆ. ಮಾರ್ಚ್ 3ರಂದು ಬೂತ್ ಮಟ್ಟದಲ್ಲಿ ನಂತರ ಮೂರು ದಿನಗಳ ಕಾಲ ಮನೆ– ಮನೆಗೆ ಭೇಟಿ ಮೂಲಕ ಪೋಲಿಯೊ ಲಸಿಕೆ ಹಾಕಲಾಗುವುದು’ ಎಂದು ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ತಿಳಿಸಿದರು.

‘196 ಸೂಪರ್‌ವೈಸರ್‌ 254 ಪಿಎಚ್‍ಸಿಒ 2008 ವ್ಯಾಕ್ಸಿನೇಟರ್ಸ್ 1438 ಆಶಾ ಹಾಗೂ 1960 ಅಂಗನವಾಡಿ ಕಾರ್ಯಕರ್ತೆಯರನ್ನು ಪೋಲಿಯೊ ಕಾರ್ಯಕ್ಕೆ ನಿಯೋಜಿಸಲಾಗಿದೆ. 92 ವ್ಯಾಕ್ಸಿನ್ ಸೆಂಟರ್‌ಗಳಿಂದ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ. 93 ವಾಹನಗಳ ಅವಶ್ಯವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT