ಹಾವೇರಿ: ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆಯಾಗುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವ ನಾಲ್ವರು ಗುತ್ತಿಗೆದಾರರಿಗೆ, ಜಿಲ್ಲಾ ಪಂಚಾಯಿತಿ ಸಿಇಒ ನಿರ್ದೇಶನದ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ನೋಟಿಸ್ ಜಾರಿ ಮಾಡಿದ್ದಾರೆ.
‘ಪ್ರಜಾವಾಣಿ’ಯಲ್ಲಿ ಜುಲೈ 13ರಂದು ‘ಅಂಗನವಾಡಿಗಳಿಗೆ ಕಳಪೆ ಮೊಟ್ಟೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ್ ಅವರು, ಅಂಗನವಾಡಿಗಳಿಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲಿಸಿ ಸ್ಪಷ್ಟವಾದ ವರದಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದರು.
ಅಂಗನವಾಡಿಗಳಿಗೆ ಎಷ್ಟು ತೂಕದ ಕೋಳಿಮೊಟ್ಟೆಗಳನ್ನು ತಿಂಗಳಿಗೆ ಯಾವ ದಿನಾಂಕದಿಂದ ಯಾವ ದಿನಾಂಕದವರೆಗೆ ಸರಬರಾಜು ಮಾಡಲಾಗಿದೆ ಎಂಬ ಮಾಹಿತಿಯನ್ನು ಕಚೇರಿಗೆ ಸಲ್ಲಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
‘ಅಂಗನವಾಡಿಗಳಿಗೆ ದಿಢೀರ್ ಭೇಟಿ ನೀಡಿ, ಯಾವ ರೀತಿಯ ಮೊಟ್ಟೆಗಳನ್ನ ಮಕ್ಕಳಿಗೆ ಕೊಡಲಾಗುತ್ತಿದೆ ಎಂಬುದನ್ನು ಪರಿಶೀಲಿಸುತ್ತೇವೆ. ಕಳಪೆ ಮೊಟ್ಟೆಗಳು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸುತ್ತೇನೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.