ಸೋಮವಾರ, ಆಗಸ್ಟ್ 2, 2021
28 °C

ಕೋವಿಡ್‌ ಎದುರಿಸಲು ಸನ್ನದ್ಧರಾಗಿ: ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗಬಹುದಾದ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿರಿಸಿಕೊಂಡು ವೈದ್ಯಕೀಯ ಸೌಲಭ್ಯ, ಮೂಲಸೌಕರ್ಯ ಹಾಗೂ ಮಾನವ ಸಂಪನ್ಮೂಲಗಳ ಹೆಚ್ಚುವರಿ ಕುರಿತಂತೆ ಯೋಜಿತ ವ್ಯವಸ್ಥೆ ಮಾಡಿಕೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಕುರಿತಂತೆ ಬುಧವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಪ್ರಕರಣಗಳು ಹೆಚ್ಚಾದಂತೆ ಹೆಚ್ಚುವರಿ ಸೌಲಭ್ಯಗಳು ಅವಶ್ಯವಾಗಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಸಂದರ್ಭದ ಮಾದರಿಯ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು. ಸೌಲಭ್ಯ ಮತ್ತು ಸಿಬ್ಬಂದಿಯನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ಸೂಚಿಸಿದರು.

ಗಂಭೀರವಾಗಿ ಪರಿಗಣಿಸಿ:

ಕೋವಿಡ್-19 ಸೋಂಕು ನಿಯಂತ್ರಣದಲ್ಲಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ದಾದಿಯರು, ಪೊಲೀಸರು, ಸರ್ಕಾರಿ ಅಧಿಕಾರಿ, ನೌಕರರಿಗೆ ಕೊರೊನಾ ಹರಡುತ್ತಿರುವುದು ಅತ್ಯಂತ ಕಳವಳಕಾರಿ ವಿಷಯ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪೀಡಿತರಾದ ಆಶಾ ಕಾರ್ಯಕರ್ತೆಯರ ಪ್ರಾಥಮಿಕ ಸಂಪರ್ಕಿತರು, ದ್ವಿತೀಯ ಸಂಪರ್ಕಿತರು, ಕಂಟೈನ್‍ಮೆಂಟ್ ವಲಯಗಳಲ್ಲಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಯಾವ ಯಾವ ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ. ಎಲ್ಲೆಲ್ಲಿಗೆ ಹೋಗಿದ್ದಾರೆ ಎಂಬ ಪ್ರವಾಸ ಹಿನ್ನೆಲೆಯನ್ನು ಸಂಗ್ರಹಿಸಬೇಕು ಎಂದು ಸೂಚನೆ ನೀಡಿದರು. 

ಆಯುಷ್‌ ವೈದ್ಯರಿಗೂ ಅವಕಾಶ ನೀಡಿ:

ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದಂತೆ ವೈದ್ಯರ ಬೇಡಿಕೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಆಯುಷ್ ವೈದ್ಯರಿಗೂ ತಪಾಸಣೆಗೆ ಅವಕಾಶ ನೀಡಿ. ಕ್ವಾರಂಟೈನ್ ಸೆಂಟರ್‌ನಲ್ಲಿರುವವರಿಗೆ ಹಾಗೂ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾದವರಿಗೆ ಆಹಾರ ಸೇರಿದಂತೆ ಮೂಲಸೌಕರ್ಯ ಒದಗಿಸುವ ಜವಾಬ್ದಾರಿಯನ್ನು ವೈದ್ಯರಿಗೆ ನೀಡಬೇಡಿ. ಆರೋಗ್ಯ ಇಲಾಖೆ ಹೊರತುಪಡಿಸಿ ಸಮಾಜ ಕಲ್ಯಾಣ, ಆಹಾರ ಇಲಾಖೆ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಿ ಆಹಾರದ ಗುಣಮಟ್ಟ ಮೂಲಸೌಕರ್ಯಗಳನ್ನು ಪರಿಶೀಲಿಸಿ ನಿತ್ಯ ಜಿಲ್ಲಾಡಳಿತಕ್ಕೆ ವರದಿ ನೀಡಲು ವ್ಯವಸ್ಥೆ ಮಾಡಿ ಎಂದು ಸಲಹೆ ನೀಡಿದರು.

ಗುಣಮಟ್ಟದ ಆಹಾರ ನೀಡಿ:

ಕೋವಿಡ್ ಸೋಂಕಿತರಿಗೆ ತಜ್ಞರ ಸಲಹೆಯಂತೆ ಆಹಾರ ಕ್ರಮ ಅನುಸರಿಸಿ, ಉತ್ತಮ ಗುಣಮಟ್ಟದ ಆಹಾರ ನೀಡಿ. ಹಣ್ಣು, ಬಿಸಿನೀರು, ಹಾಲು, ಟೀ, ಕಾಫಿ, ಡ್ರೈ ಫ್ರೂಟ್ಸ್ ಸೇರಿದಂತೆ ಗುಣಮಟ್ಟದ ಪೌಷ್ಟಿಕ ಆಹಾರ ನೀಡಿ. ಆಸ್ಪತ್ರೆಗಳ ವಾರ್ಡ್ ಹಾಗೂ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಬಿಸಿನೀರು ಹಾಗೂ ಕಾಫಿ, ಟೀ ಮಷಿನ್ ಅಳವಡಿಸಿ. ಸಮಯಕ್ಕೆ ಸರಿಯಾಗಿ ಊಟ, ಉಪಹಾರ ಒದಗಿಸಿ. ಸಾಧ್ಯವಾದರೆ ಮನರಂಜನೆಗಾಗಿ ಟಿವಿಗಳನ್ನು ಅಳವಡಿಸಿ ಎಂದು ತಾಕೀತು ಮಾಡಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸವಣೂರ ಉಪವಿಭಾಗಾಧಿಕಾರಿ  ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಸಮಾಜ ಕಲ್ಯಾಣ ಅಧಿಕಾರಿ ಚೈತ್ರಾ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು