ಬೆಲೆ ಏರಿಕೆ: ಡಿವೈಎಫ್‌ಐ ಖಂಡನೆ

ಹಾವೇರಿ: ‘ಕೊರೊನಾ ಸೋಂಕು ಜನಸಾಮಾನ್ಯರ ಬದುಕನ್ನು ಕಸಿದುಕೊಂಡಿರುವ ಈ ಕರಾಳ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಿಸಿ ಜನರ ಮೇಲೆ ಕ್ರೌರ್ಯ ಮೆರೆಯುತ್ತಿದೆ’ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಕ್ರೋಶ ವ್ಯಕ್ತಪಡಿಸಿದರು.
ಅಡುಗೆ ಅನಿಲ ಬೆಲೆ ಇಳಿಕೆಗೆ ಒತ್ತಾಯಿಸಿ ಬುಧವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಜನತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪೆಟ್ರೋಲ್- ಡೀಸೆಲ್ ಬೆಲೆ, ಧಾನ್ಯಗಳ ಬೆಲೆ, ಹಾಗೂ ಅಡುಗೆ ಎಣ್ಣೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಬದುಕು ನಡೆಸುವುದೇ ದುಸ್ತರವಾಗಿದೆ ಎಂದರು.
ವಕೀಲರಾದ ನಾರಾಯಣ ಕಾಳೆ ಮಾತನಾಡಿ, ‘ಬಿಜೆಪಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಜನ ಸಾಮಾನ್ಯರು ಜೀವನ ನಡೆಸಲು ತೊಂದರೆಯಾಗಿದೆ. ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿ, ಕೋವಿಡ್‌ನಿಂದ ನೊಂದಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆಯಲಾಗಿದೆ’ ಎಂದು ಆರೋಪಿಸಿದರು.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ, ಎಐಎಲ್ಯು ಮುಖಂಡರಾದ ಜಿ.ಎ. ಹಿರೇಮಠ, ಡಿವೈಎಫ್ಐ ಜಿಲ್ಲಾ ಮುಖಂಡರಾದ ಮಲ್ಲೇಶ ಬಸಾಪೂರ, ಕೃಷ್ಣ ಕಡಕೋಳ, ಪ್ರಸನ್ನ ಬಿ.ಕೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.