ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ. ಚುನಾವಣೆ: ಗ್ರಾಮ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿ

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ
Last Updated 19 ಡಿಸೆಂಬರ್ 2020, 13:40 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸುಗಮ ಹಾಗೂ ಶಾಂತಿಯುತ ಮತದಾನಕ್ಕಾಗಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮತದಾನ ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಮೊದಲ ಹಂತದಲ್ಲಿ ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಿ.20ರ ಸಂಜೆ 5 ಗಂಟೆಯಿಂದ ಡಿ.22ರ ಸಂಜೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎರಡನೇ ಹಂತದಲ್ಲಿ ನಡೆಯುವ ಮತದಾನಕ್ಕೆ ಬ್ಯಾಡಗಿ, ಶಿಗ್ಗಾವಿ, ಸವಣೂರ, ಹಾನಗಲ್ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಿ.25ರ ಸಂಜೆ 5 ಗಂಟೆಯಿಂದ ಡಿ.27ರ ಸಂಜೆ 5 ಗಂಟೆವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಸಭೆ–ಸಮಾರಂಭ ನಿಷೇಧ:ಚುನಾವಣೆ ಜರುಗುವ ವ್ಯಾಪ್ತಿಯಲ್ಲಿ ಹಾಗೂ ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಪ್ರಚಾರದ ಸಲುವಾಗಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಗೂಡುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿಗಳು/ ಬೆಂಬಲಿಗರು ಮನೆ– ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು, ಅದರಲ್ಲಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ. ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮದುವೆ, ಶವ ಸಂಸ್ಕಾರಕ್ಕೆ ನಿರ್ಬಂಧವಿಲ್ಲ:ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು. ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್‌ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಜೆರಾಕ್ಸ್‌ ಅಂಗಡಿ ಮುಚ್ಚಿ:ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನವು ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಎಲ್ಲ ಸ್ಕ್ಯಾನಿಂಗ್ ಮತ್ತು ಜೆರಾಕ್ಸ್‌ ಸೆಂಟರ್‌ಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೊಸ್ಟರ್/ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಜಿಲ್ಲೆಯ ಗ್ರಾಮ ಪಂಚಾಯತ ಚುನಾವಣೆ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ ಪ್ರಚಾರ ಮಾಡುವುದನ್ನು, ವಾಹನಗಳ ಬಳಕೆಯನ್ನು ಹಾಗೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಚುನಾವಣೆ: ಸಂತೆ- ಜಾತ್ರೆ ರದ್ದು
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಮತದಾನ ನಡೆಯುವ ಹಾಗೂ ಮತ ಎಣಿಕೆ ದಿನ ಜಿಲ್ಲೆಯಲ್ಲಿ ಜರುಗುವ ಸಂತೆ ಹಾಗೂ ಜಾತ್ರೆಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಡಿ.22ರಂದು ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ, ಬಸಾಪೂರ, ಕರ್ಜಗಿ, ಹಿರೇಕೆರೂರು ತಾಲ್ಲೂಕಿನ ಕೋಡ ಗ್ರಾಮದಲ್ಲಿ ನಡೆಯುವ ಸಂತೆಗಳನ್ನು ರದ್ದುಪಡಿಸಲಾಗಿದೆ. ಡಿ.27ರಂದು ಗ್ರಾಮ ಪಂಚಾಯಿತಿ ಎರಡನೇ ಹಂತದಲ್ಲಿ ಮತದಾನ ನಡೆಯುವ ಬ್ಯಾಡಗಿ ತಾಲ್ಲೂಕು ಗುಂಡೇನಹಳ್ಳಿ, ಮತ್ತೂರ, ಶಿಗ್ಗಾವಿ ತಾಲ್ಲೂಕು ಕೋಣನಕೇರಿ, ಹುಲಗೂರ ಹಾಗೂ ಹಾನಗಲ್ ತಾಲ್ಲೂಕಿನ ಕುಸನೂರ ಗ್ರಾಮಗಳ ಸಂತೆಗಳನ್ನು ರದ್ದುಪಡಿಸಲಾಗಿದೆ. ಡಿ.30ರಂದು ಮತ ಎಣಿಕೆ ನಡೆಯಲಿದ್ದು, ಶಿಗ್ಗಾವಿ ಪಟ್ಟಣದ ಸಂತೆಯನ್ನು ರದ್ದುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT