ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಬಾಲ್ಯ, ಹಕ್ಕುಗಳನ್ನು ರಕ್ಷಿಸಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಕಾರ್ಯಾಗಾರ: ಜಿಲ್ಲಾಧಿಕಾರಿ ಹೇಳಿಕೆ
Last Updated 8 ಸೆಪ್ಟೆಂಬರ್ 2022, 13:01 IST
ಅಕ್ಷರ ಗಾತ್ರ

ಹಾವೇರಿ: ‘ಮಕ್ಕಳ ಬಾಲ್ಯ ಹಾಗೂ ಹಕ್ಕುಗಳನ್ನು ರಕ್ಷಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಮಕ್ಕಳನ್ನು ದುಡಿಮೆಗೆ ತೊಡಗಿಸಿಕೊಂಡವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಗುರುವಾರ ನಡೆದ ‘ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆ 1986ರ ಕಲಂ 16 ಮತ್ತು 17ರಡಿ ನೇಮಕಗೊಂಡ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವದಲ್ಲಿ 3 ಕೋಟಿಮಕ್ಕಳು ಶಾಲೆಯಿಂದ ಹೊರಗುಳಿದು ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಹಣದಾಸೆಗೆ ಮಕ್ಕಳನ್ನು ಅಪಾಯಕಾರಿ ಕೆಲಸಕ್ಕೆ ಬಳಸಿಕೊಳ್ಳುವುದು ಕಾನೂನಿನಡಿ ಅಪರಾಧವಾಗಿದೆ. ಈ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಡಿ, ನಿರೀಕ್ಷಕರಾಗಿ ಅಧಿಸೂಚಿಸಲ್ಪಟ್ಟ 13 ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ನಿರಂತರವಾದ ಯೋಜಿತ ಹಾಗೂ ಅನಿರೀಕ್ಷಿತ ದಾಳಿ ನಡೆಸಿ, ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಬೇಕು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟರಾಜು ಮಾತನಾಡಿ, ಪ್ರತಿ ಮಗು ದೇಶದ ಆಸ್ತಿ. ಅವರಿಗೆ ಸಂವಿಧಾನ ವಿಧಿ 21ಎ ಅಡಿಯಲ್ಲಿ ಉಚಿತ ವತ್ತು ಕಡ್ಡಾಯ ಶಿಕ್ಷಣ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಕೇಂದ್ರ ಸರ್ಕಾರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ 1986ರಲ್ಲಿ ಬಾಲ್ಯಾವ್ಯವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಜಾರಿಗೆ ತಂದಿದೆ. ಕೇವಲ ಕಾನೂನನ್ನು ತಿಳಿದುಕೊಂಡರೆ ಸಾಲದು, ಕಾರ್ಯರೂಪಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಪೊಲೀಸ್‌ ಇಲಾಖೆಯ ಎಂ.ಆರ್. ಜಾಲಗಾರ ಉಪನ್ಯಾಸ ನೀಡಿದರು. ಬಾಲಕಾರ್ಮಿಕ ನಿಷೇಧದ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

‘ಬಾಲಕಾರ್ಮಿಕರು ಕಂಡರೆ 112ಕ್ಕೆ ಕರೆ ಮಾಡಿ’

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ‘ಗ್ಯಾರೇಜ್, ವೆಲ್ಡಿಂಗ್‍ಶಾಪ್, ಕೈಗಾರಿಕೆ, ಇಟ್ಟಿಗೆ ಭಟ್ಟಿ, ಗಾರೆ ಕೆಲಸ ಹೀಗೆ ಹಲವಾರು ಅಪಾಯಕಾರಿ ಕೆಲಸದಲ್ಲಿ ಮಕ್ಕಳು ಕಂಡು ಬಂದಲ್ಲಿ ಏಕಗವಾಕ್ಷಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ದೂರು ದಾಖಲಿಸಿದಲ್ಲಿ ತಕ್ಷಣವೇ ಸ್ಪಂದಿಸಿ ಮಗುವನ್ನು ವಶಕ್ಕೆ ಪಡೆದು ಸುರಕ್ಷಿತ ಸ್ಥಳಕ್ಕೆ ಕರೆತಂದು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ರಾಣೇಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಮಕ್ಕಳನ್ನು ಭಿಕ್ಷಾಟನೆ ಕಾರ್ಯದಲ್ಲಿ ತೊಡಗಿಸಿಕೊಂಡವರ ವಿರುದ್ಧ ಈಗಾಲೇ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್‌, ಡಿವೈಎಸ್ಪಿ ಶಿವಾನಂದ ಚಲವಾದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT