ಗುರುವಾರ , ಆಗಸ್ಟ್ 5, 2021
21 °C
ಭಾನುವಾರದ ಕಫ್ರ್ಯೂ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಜಿಲ್ಲಾಧಿಕಾರಿ

ಮಾಸ್ಕ್‌ ಧರಿಸದವರಿಗೆ ದಂಡ ಹಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲೆಯಲ್ಲಿ ಭಾನುವಾರದ ಕರ್ಫ್ಯೂವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದರು.

ವಿವಿಧ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ಪ್ರತಿದಿನ ಸಂಜೆ 8ರಿಂದ ಬೆಳಿಗ್ಗೆ 5 ಗಂಟೆವರೆಗೆ ಹಾಗೂ ಭಾನುವಾರದ ಪೂರ್ಣ ಕರ್ಫ್ಯೂವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಕಫ್ರ್ಯೂ ನಿಯಮ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸುವವರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದರು.

ಸಂತೆ, ಧಾರ್ಮಿಕ ಸಮಾರಂಭಗಳಿಗೆ ಅವಕಾಶ ನೀಡಬೇಡಿ. ನಿಯಮದಂತೆ ಮದುವೆಗೆ ಅನುಮತಿ ಪಡೆದು 50 ಜನರು ಮಾತ್ರ ಭಾಗವಹಿಸಬೇಕು. ಮದುವೆಯಲ್ಲಿ ಭಾಗವಹಿಸಿದವರು ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕು ಎಂದು ಸೂಚನೆ ನೀಡಿದರು.

ಮಾಹಿತಿ ನೀಡಿ: ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ, ಹೊರ ಜಿಲ್ಲೆಗಳಲ್ಲಿ ವಿವಾಹ ಕಾರ್ಯಕ್ರಮಕ್ಕೆ ಹೋಗಿಬಂದವರು ಕಡ್ಡಾಯವಾಗಿ ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು. ಭಾನುವಾರ ಕಫ್ರ್ಯೂ ದಿನ ಮದುವೆಗೆ ಅವಕಾಶವಿರುವುದಿಲ್ಲ. ಈಗಾಗಲೇ ನಿಗದಿಯಾಗಿದ್ದರೆ ಷರತ್ತಿನನ್ವಯ ಅನುಮತಿ ನೀಡಬೇಕು ಎಂದು ತಿಳಿಸಿದರು.

ಅಂಗಡಿ ಮುಚ್ಚಿಸಿ: ಸೋಮವಾರದಿಂದ ರಾತ್ರಿ ಎಂಟು ಗಂಟೆಯೊಳಗಾಗಿ ಎಲ್ಲ ಅಂಗಡಿಗಳನ್ನು ಮುಚ್ಚಬೇಕು. ಭಾನುವಾರ ಹಾಲು, ಔಷಧ, ತರಕಾರಿ ಹೊರತುಪಡಿಸಿ ಎಲ್ಲ ಅಂಗಡಿಗಳನ್ನು ಮುಚ್ಚಿಸಬೇಕು. ತರಕಾರಿ ಮಾರಾಟಕ್ಕೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸೂಚನೆ ನೀಡಿದರು.

ಕಂಟೈನ್ಮೆಂಟ್ ಜೋನ್‍ಗಳಲ್ಲಿ ಉಚಿತ ಪಡಿತರ ಅವಶ್ಯವಿದ್ದರೆ ಪ್ರಸ್ತಾವ ಸಲ್ಲಿಸಿ ಪ್ರತಿ ಕುಟುಂಬಕ್ಕೆ 10 ಕೆ.ಜಿ. ಅಕ್ಕಿ ಹಾಗೂ ಐದು ಕೆ.ಜಿ. ಗೋಧಿಯಂತೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ತಾಲ್ಲೂಕು ಆಡಳಿತಕ್ಕೆ ಕೋವಿಡ್ ನಿರ್ವಹಣೆಗಾಗಿ ₹3.50 ಲಕ್ಷ ಬಿಡುಗಡೆ ಮಾಡಲಾಗಿದೆ. ಹೊಸದಾಗಿ ₹2 ಲಕ್ಷ ಬಿಡುಗಡೆ ಮಾಡಲಾಗುವುದು. ಯಾವುದೇ ಕೊರತೆಯಾಗದಂತೆ ವ್ಯವಸ್ಥಿತವಾಗಿ ಸರ್ಕಾರದ ಮಾರ್ಗಸೂಚಿಯಂತೆ ನಿರ್ವಹಣೆ ಮಾಡಲು ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಮಾಸ್ಕ್ ಧರಿಸದೇ ಇರುವವರಿಗೆ ದಂಡ ಹಾಕಲು ವಿಶೇಷ ಅಭಿಯಾನ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಎಲ್ಲ ನೆರವನ್ನು ನೀಡುವುದಾಗಿ ತಿಳಿಸಿದರು.

ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗರಾಜ ನಾಯಕ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.