ಮಂಗಳವಾರ, ಜೂನ್ 28, 2022
25 °C
ಎರಡು ಮನೆ ಸಂಪೂರ್ಣ ಹಾನಿ, ಹೆಚ್ಚುವರಿ ಶೇ 492 ಮಳೆ

ಮಳೆ ಕಾರಣದಿಂದ ಹಾಸನದಲ್ಲಿ 96 ಮನೆಗಳಿಗೆ ಭಾಗಶಃ ಹಾನಿ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ವಾರದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದರೂ ಹೆಚ್ಚಿನ ಬೆಳೆ ಹಾಗೂ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

‘ವಾರದಲ್ಲಿ ವಾಡಿಕೆ ಮಳೆ 24 ಮಿ.ಮೀ ಪೈಕಿ 146 ಮಿ.ಮೀ ಮಳೆಯಾಗಿದೆ. ಶೇಕಡಾ 492 ಪ್ರತಿಶತ ಹೆಚ್ಚುವರಿ ಸುರಿದಿದೆ. ಹೊಳೆನರಸೀಪುರದಲ್ಲಿ ಕಟ್ಟಡ ಬಿದ್ದು ಮೃತಪಟ್ಟ ವ್ಯಕ್ತಿಗೆ ₹5 ಲಕ್ಷ ಪರಿಹಾರ ನೀಡಲಾಗಿದೆ. 4 ಜಾನುವಾರುಗಳು ಸಾವಿಗೀಡಾಗಿವೆ. ಜನವರಿಯಿಂದ 5 ಮಂದಿ ಸಿಡಿಲು ಬಡಿತಕ್ಕೆ ಸಾವಿಗೀಡಾಗಿದ್ದು, ವಿಪತ್ತು ನಿರ್ವಹಣೆ ನಿಧಿಯಡಿ ಪರಿಹಾರ ಒದಗಿಸಲಾಗಿದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ವ್ಯಾಪಕ ಮಳೆಯಿಂದ 96 ಮನೆಗಳಿಗೆ ಭಾಗಶಃ ಹಾನಿ, ಎರಡು ಮನೆ ಪೂರ್ಣ ಹಾನಿಯಾಗಿವೆ. ಅವುಗಳಿಗೆ ಎಸ್‌ಡಿಆರ್‌ಎಸ್ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿ ಬೈಪಾಸ್ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದ್ದು, ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಇದೀಗ ಶುರುವಾಗಿರುವುದರಿಂದ ಹೆಚ್ಚಿನ ಬೆಳೆ ಹಾನಿ ಸಂಭವಿಸಿಲ್ಲ. ಹೊಳೆನರಸೀಪುರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ನಾಲೆ ದುರಸ್ತಿ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅಪಾಯ ಎದುರಿಸುತ್ತಿರುವ ಮನೆಗಳಲ್ಲಿನ ಸಾರ್ವಜನಿಕರನ್ನು ಸ್ಥಳಾಂತರಿಸಲು ಆಯಾ ತಾಲ್ಲೂಕು ತಹಶೀಲ್ದಾರರು ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

‘ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದ್ದು, 795 ಪರೀಕ್ಷಾರ್ಥಿಗಳು ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಶಿಕ್ಷಣ ಇಲಾಖೆ ಇಬ್ಬರು ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳ ಪರಿಶೀಲನೆಗೆ ವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗದಂತೆ ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಪರೀಕ್ಷೆ ತೆಗೆದುಕೊಂಡ 19,994 ವಿದ್ಯಾರ್ಥಿಗಳ ಪೈಕಿ 19,115 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್.ಪ್ರಕಾಶ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು