ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘6 ಕ್ಷೇತ್ರ ಗೆಲ್ಲುವ ಸಂಕಲ್ಪ ಮಾಡಿ’

ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಭೆ: ಸಲೀಂ ಅಹಮದ್‌ ಕರೆ
Last Updated 19 ನವೆಂಬರ್ 2022, 15:18 IST
ಅಕ್ಷರ ಗಾತ್ರ

ಹಾವೇರಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 6 ಕ್ಷೇತ್ರಗಳನ್ನು ಗೆಲ್ಲುವ ಸಂಕಲ್ಪ ಮಾಡಬೇಕು. ಈ ನಿಟ್ಟಿನಲ್ಲಿ ಕಾರ್ಯರ್ತರು ಬೂತ್‍ಮಟ್ಟದಿಂದ ಪಕ್ಷ ಸಂಘಟಿಸಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಡಳಿತಕ್ಕೆ ಬರಲಿದೆ’ ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌ ಹೇಳಿದರು.

ನಗರದ ಗುರುಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ ಮಾಜಿ ಪ್ರಧಾನಿ ಇಂದಿರಾಗಾಂಧಿ 106ನೇ ಜಯಂತಿ ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

‘ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿಯಾಗಿ ಮಾಡಿದೆ. ಭ್ರಷ್ಟಾಚಾರ, ಜನವಿರೋಧಿ ನೀತಿಯಿಂದ ಬೇಸತ್ತಿರುವ ಜನತೆ ಬಿಜೆಪಿ ಸರ್ಕಾರವನ್ನು ಮನೆಗೆ ಕಳುಹಿಸುವ ಸಂಕಲ್ಪ ಮಾಡಿದ್ದಾರೆ’ ಎಂದರು.

ಕಳೆದ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರು ಗೌರವಧನ ಹೆಚ್ಚಳ ಮಾಡುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಗೌರವಧನ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಮತ್ತೆ ಬೆಳಗಾವಿಯ ಅಧಿವೇಶನದಲ್ಲಿ ಒತ್ತಾಯಿಸಲಾಗುವುದು ಎಂದರು.

ಮಾಜಿ ಸ್ವೀಕರ್ ಕೆ.ಬಿ. ಕೋಳಿವಾಡ ಮಾತನಾಡಿ, ‘ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ರಾಜೀವಗಾಂಧಿ ಅವರು ಗ್ರಾ.ಪಂ.ನಲ್ಲಿ ಮೀಸಲಾತಿ ತಂದರು. ಇದರಿಂದ ಎಲ್ಲ ವರ್ಗಕ್ಕೂ ಅಧಿಕಾರ ಸಿಗುವಂತಾಯಿತು. ಆದರೆ ಬಿಜೆಪಿ ಸರ್ಕಾರ ಪಂಚಾಯತ್ ರಾಜ್ ವಿರೋಧಿ ಸರ್ಕಾರವಾಗಿದ್ದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಿಲ್ಲ. ಕೇವಲ ಸುಳ್ಳು ಹೇಳುವುದರಲ್ಲಿಯೇ ಕಾಲಹರಣ ಮಾಡುತ್ತಿದೆ’ ಎಂದರು.

ಕಚೇರಿ ಉದ್ಘಾಟನೆ:

ಹಾವೇರಿ ನಗರಸಭೆ ಕಟ್ಟಡದಲ್ಲಿ ತಮ್ಮ ಕಚೇರಿಯನ್ನು ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌ ಉದ್ಘಾಟಿಸಿದರು. ನಗರಸಭಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ ನೇತೃತ್ವದಲ್ಲಿ ಕಾಂಗ್ರೆಸ್‌ ನಗರಸಭಾ ಸದಸ್ಯರು ಸಲೀಂ ಅವರಿಗೆ ಸಿಹಿ ತಿನ್ನಿಸಿ, ಸನ್ಮಾನಿಸಿದರು.

‘ಕಾಂಗ್ರೆಸ್‌ ಟಿಕೆಟ್‌ಗಾಗಿ ಸಾವಿರ ಅರ್ಜಿಗಳು’

ವಿಧಾನಸಭಾ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ಗಾಗಿ ರಾಜ್ಯದಾದ್ಯಂತ 1 ಸಾವಿರ ಅರ್ಜಿಗಳು ಬಂದಿವೆ. ಇನ್ನೂ 250 ಅರ್ಜಿಗಳು ಬರುವ ನಿರೀಕ್ಷೆಯಿದೆ. ಆಯಾ ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ಅರ್ಜಿಗಳನ್ನು ಕಳುಹಿಸಿ ಮಾಹಿತಿ ತರಿಸಿಕೊಳ್ಳುತ್ತೇವೆ. ಎಐಸಿಸಿಯಿಂದ ಒಂದು ಸಾವಿರ ಮಂದಿ ಸರ್ವೆ ಮಾಡುತ್ತಿದ್ದಾರೆ. ವರಿಷ್ಠರು ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಡಿಸೆಂಬರ್‌ ಒಳಗೆ 150 ಸ್ಥಾನಗಳ ಅಭ್ಯರ್ಥಿಗಳನ್ನು ತೀರ್ಮಾನಿಸಲಾಗುತ್ತದೆ’ ಎಂದು ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌ ಹೇಳಿದರು.

ವಿಧಾನ ಪರಿಷತ್‌ ಮಾಜಿ ಮುಖ್ಯ ಸಚೇತಕ ನಾರಾಯಣಸ್ವಾಮಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಮನೋಹರ ತಹಶೀಲ್ದಾರ್‌, ರುದ್ರಪ್ಪ ಲಮಾಣಿ, ಶಾಸಕ ಶ್ರೀನಿವಾಸ ಮಾನೆ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಎಸ್.ಆರ್. ಪಾಟೀಲ, ಡಾ.ಎಂ.ಆರ್.ಕುಬೇರಪ್ಪ, ಬಸವರಾಜ ಗುರಿಕಾರ, ಕೊಟ್ರೇಶಪ್ಪ ಬಸೇಗಣ್ಣಿ, ಪ್ರಕಾಶ ಕೋಳಿವಾಡ, ಡಿ.ಬಸವರಾಜ, ಸಂಜೀವಕುಮಾರ ನೀರಲಗಿ, ಎಸ್‍ಎಫ್‍ಎನ್. ಗಾಜೀಗೌಡ್ರ, ಡಾ.ಪ್ರಕಾಶಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT