ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರರಹಿತ ಆಡಳಿತಕ್ಕೆ ಕಾಂಗ್ರೆಸ್‌ ಒತ್ತು: ಸಲೀಂ ಅಹಮದ್‌

ಆಗಸ್ಟ್‌ ಒಳಗೆ 4 ಗ್ಯಾರಂಟಿಗಳ ಅನುಷ್ಠಾನ:
Published 12 ಜೂನ್ 2023, 16:45 IST
Last Updated 12 ಜೂನ್ 2023, 16:45 IST
ಅಕ್ಷರ ಗಾತ್ರ

ಹಾವೇರಿ: ‘ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡಿ ನಾವು ಚುನಾವಣೆಯಲ್ಲಿ ಜನಾಶೀರ್ವಾದ ಪಡೆದಿದ್ದೇವೆ. ಅಧಿಕಾರಿಗಳು ಭ್ರಷ್ಟಾಚಾರ ನಡೆಸದೆ, ಸರ್ಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರರಹಿತ ಆಡಳಿತ ನೀಡಲಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ತಿಳಿಸಿದರು. 

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾವು ಸೋತಾಗ ಕುಗ್ಗಲಿಲ್ಲ, ಗೆದ್ದಾಗ ಬೀಗುವುದಿಲ್ಲ. ನಮ್ರತೆಯಿಂದ ಜನಸೇವೆ ಮಾಡುತ್ತೇವೆ. ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರಲು ಬೆಂಬಲ ನೀಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಹಾಗೂ ಪಕ್ಷದ ಕಾರ್ಯಕರ್ತರು, ಮುಖಂಡರ ಶ್ರಮವನ್ನು ಶ್ಲಾಘಿಸುತ್ತೇನೆ’ ಎಂದರು. 

ಆಗಸ್ಟ್‌ನೊಳಗೆ ‘ಗ್ಯಾರಂಟಿ’ ಅನುಷ್ಠಾನ: ‘ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ಮೊದಲ ಕ್ಯಾಬಿನೆಟ್‌ನಲ್ಲೇ ಚರ್ಚಿಸಿ ಸುತ್ತೋಲೆ ಹೊರಡಿಸಿದ್ದೇವೆ. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕಲ್ಪಿಸುವ ಐತಿಹಾಸಿಕ ‘ಶಕ್ತಿ’ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಆಗಸ್ಟ್‌ ತಿಂಗಳ ಒಳಗಾಗಿ ಉಳಿದ 4 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ’ ಎಂದು ಭರವಸೆ ನೀಡಿದರು. 

‘ಶೇ 43ರಷ್ಟು ಮತಗಳನ್ನು ನೀಡಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದಾರೆ. 2013ರಲ್ಲಿ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ 165 ಭರವಸೆಗಳನ್ನು ನಾವು ಈಡೇರಿಸಿದ್ದೆವು. ನಾವು ನುಡಿದಂತೆ ನಡೆದಿದ್ದೇವೆ. ಈಗ ಕಾಂಗ್ರೆಸ್‌ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿರುವ ಬಿಜೆಪಿ, ಜನರಿಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ ಅಧಿಕಾರ ಕಳೆದುಕೊಂಡಿತು’ ಎಂದು ಕುಟುಕಿದರು. 

ಬಿಜೆಪಿಗೆ ನೈತಿಕತೆಯಿಲ್ಲ: ‘ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದರೆ ನೂರು ದಿನಗಳಲ್ಲಿ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕುತ್ತೇವೆ ಹಾಗೂ 7 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ್ದರು. ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ದಿನಸಿ ವಸ್ತುಗಳ ಬೆಲೆ ಏರಿಸಿದ್ದರಿಂದ ಬಡ ಜನರ ಬದುಕು ದುರ್ಬರವಾಯಿತು. ಕಾಂಗ್ರೆಸ್‌ ಅನ್ನು ಟೀಕಿಸುವ ನೈತಿಕತೆ ಬಿಜೆಪಿಗಿಲ್ಲ’ ಎಂದು ತಿರುಗೇಟು ನೀಡಿದರು. 

‘ಹಾವೇರಿ ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ, ಸಚಿವ ಸ್ಥಾನ ಸಿಗದೇ ಜಿಲ್ಲೆಗೆ ಅನ್ಯಾಯವಾಗಿದೆ’ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಮುಂದಿನ ದಿನಗಳಲ್ಲಿ ಜಿಲ್ಲೆಗೆ ನ್ಯಾಯ ಕಲ್ಪಿಸಲಾಗುವುದು’ ಎಂದು ಚುಟುಕಾಗಿ ಉತ್ತರಿಸಿದರು. 

ಮಾಜಿ ಶಾಸಕ ಸೋಮಣ್ಣ ಬೇವಿನಮರದ, ಕಾಂಗ್ರೆಸ್‌ ಮುಖಂಡರಾದ ಸಂಜೀವಕುಮಾರ ನೀರಲಗಿ, ಶಿವಕುಮಾರ ತಾವರಗಿ ಇದ್ದರು. 

‘ಲೋಕಸಭೆ ಚುನಾವಣೆ: 20 ಸ್ಥಾನ ಗೆಲ್ಲುತ್ತೇವೆ’

‘ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಉತ್ಸುಕವಾಗಿದ್ದೇವೆ. ಈಗಾಗಲೇ ಚುನಾವಣೆ ಎದುರಿಸಲು ತಯಾರಿ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುತ್ತೇವೆ. 9 ವರ್ಷಗಳಿಂದ ಸುಳ್ಳು ಹೇಳಿಕೊಂಡು ಬಂದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌ ಹೇಳಿದರು.

‘ಇಂದಿರಾ ಕ್ಯಾಂಟೀನ್‌ ಪುನರಾರಂಭ’

‘ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಭ್ರಷ್ಟಾಚಾರ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾವ್ಯಾವ ಇಲಾಖೆ ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಬಾಗಿಲು ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಯುತ್ತಿದೆ. ಬಿಜೆಪಿಯ ಜನಪರ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಸಲೀಂ ಅಹಮದ್‌ ಉತ್ತರಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT