ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧರಾಮೇಶ್ವರ ವಜ್ರಮಹೋತ್ಸವ ಆ.1ರಂದು

Last Updated 26 ಜುಲೈ 2022, 12:50 IST
ಅಕ್ಷರ ಗಾತ್ರ

ಹಾವೇರಿ: ದಾವಣಗೆರೆಯಲ್ಲಿ ಆ.1ರಂದು ಶಿವಯೋಗಿ ಸಿದ್ಧರಾಮೇಶ್ವರ ದೇವರ ವಜ್ರಮಹೋತ್ಸವ (60ನೇ ರಥೋತ್ಸವ) ಹಾಗೂ ಲಿಂ.ಸಿದ್ಧರಾಮೇಶ್ವರ ಶ್ರೀಗಳ 20ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದ್ದು, ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಭೋವಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಪೂಜಾರ್‌ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಥೋತ್ಸವಕ್ಕೆ ಚಾಲನೆ ನೀಡುವರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 60 ಶರಣರ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಸಮಾರಂಭದಲ್ಲಿ ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು, ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಡಾ.ಶಾಂತವೀರ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ 100ಕ್ಕೂ ಹೆಚ್ಚು ಮಠಾಧೀಪತಿಗಳು ಹಾಗೂ ಭೋವಿ ಸಮಾಜದ ಶಾಸಕರಾದ ಅರವಿಂದ ಲಿಂಬಾವಳಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಅಖಂಡ ಶ್ರೀನಿವಾಸ ಮೂರ್ತಿ, ಎಸ್.ರಘು, ಡಿ.ಎಸ್.ಹೊಲಗೇರಿ, ಮಾಜಿ ಸಚಿವ ಶಿವರಾಜ ತಂಗಡಗಿ ಸೇರದಂತೆ ಭೋವಿ ಸಮಾಜದ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಿದ್ಧರಾಮೇಶ್ವರ ದೇವರ ಬೆಳ್ಳಿ ಮೂರ್ತಿಯ ರಥೋತ್ಸವ, ಲಿಂ.ಸಿದ್ಧರಾಮೇಶ್ವರ ಶ್ರೀಗಳ ಅಂಬಾರಿ ಉತ್ಸವ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಜಾನಪದ ಕಲಾತಂಡಗಳು ಹಾಗೂ 25 ಸಾವಿರ ಶರಣೆಯರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿರುವುದು ಕಾರ್ಯಕ್ರಮದ ವಿಶೇಷವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ಜಿಲ್ಲೆಯಿಂದ ಸುಮಾರು 8-10 ಸಾವಿರ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭೋವಿ ಸಮಾಜದ ಶಕ್ತಿ ಪ್ರದರ್ಶನ ಜೊತೆಗೆ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆ ಹಾಗೂ ಸಮಾಜದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯುವ ಉದ್ದೇಶ ಹೊಂದಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಜಗದೀಶ ಮಲಗೋಡ, ಹನುಮಂತಪ್ಪ ದೇವಗಿರಿ, ಎಚ್.ಕೆ.ವಡ್ಡರ, ದ್ಯಾಮಣ್ಣ ಅರಸನಾಳ, ಬಸವರಾಜ ವಡ್ಡರ, ಅರ್ಜುನ ಹಂಚಿನಮನಿ, ಜಗದೀಶ ಸವಣೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT