ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿನ್ ರಾವತ್ ಸಾವು: ವಿಕೃತ ಪೋಸ್ಟ್‌ ಮಾಡಿದವರ ವಿರುದ್ಧ ಎಫ್‌ಐಆರ್‌; ಸಿಎಂ ಸೂಚನೆ

Last Updated 10 ಡಿಸೆಂಬರ್ 2021, 12:38 IST
ಅಕ್ಷರ ಗಾತ್ರ

ಹಾವೇರಿ: ‘ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಅವರ ಸಾವನ್ನು ಸಂಭ್ರಮಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದವರ ವಿಳಾಸ ಪತ್ತೆ ಹಚ್ಚಿ, ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದ್ದೇನೆ. ವಿಕೃತ ಮನಸ್ಸುಗಳಿಗೆ ಶಿಕ್ಷೆ ವಿಧಿಸಲೇಬೇಕಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಧಾರವಾಡ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆ ಅಂಗವಾಗಿ ಶಿಗ್ಗಾವಿ ತಾಲ್ಲೂಕು ಪಂಚಾಯಿತಿ ಕಚೇರಿ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ ಟ್ವೀಟ್‌ ಮಾಡಿ ಸಂಭ್ರಮಾಚರಣೆ ಮಾಡಿವೆ. ಇದನ್ನು ಪ್ರತಿಯೊಬ್ಬ ಭಾರತೀಯನೂ ಖಂಡಿಸಬೇಕು. ಸೇನೆಗಳನ್ನು ಮುನ್ನಡೆಸಿ, ದೇಶದ ರಕ್ಷಣೆ ಮಾಡಿದ ನಾಯಕನಿಗೆ ಅಗೌರವ ತೋರಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್‌ ಮುಖ್ಯಸ್ಥರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಬಿಪಿನ್‌ ರಾವತ್‌ ಅವರುಹೆಲಿಕಾಪ್ಟರ್‌ ದುರಂತದಲ್ಲಿ ಹುತಾತ್ಮರಾಗಿದ್ದಾರೆ. ಕನ್ನಡ ನಾಡಿನ ಜನತೆಯ ಪರವಾಗಿ ಹೃದಯಾಳದ ಗೌರವ ಮತ್ತು ಶ್ರದ್ಧಾಂಜಲಿ ಅರ್ಪಿಸುತ್ತೇನೆ.ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರನ್ನು ನೋಡಲು ಏರ್‌ಫೋರ್ಸ್‌ ಕಮಾಂಡ್ ಆಸ್ಪತ್ರೆಗೆ ಹೋಗಿದ್ದೆ. ಪರಿಣತ ವೈದ್ಯರ ತಂಡದಿಂದ ಅತ್ಯುತ್ತಮ ಚಿಕಿತ್ಸೆ ಸಿಗುತ್ತಿದೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿನಾವು (ಬಿಜೆಪಿ) ಸ್ಪರ್ಧೆ ಮಾಡಿರುವ ಎಲ್ಲ ಕ್ಷೇತ್ರಗಳಲ್ಲಿ ಜಯ ಸಿಗುವ ವಿಶ್ವಾಸವಿದೆ.ಸರ್ಕಾರದಿಂದ ಕೆಲವು ಕಾನೂನುಗಳನ್ನು ಜಾರಿಗೆ ತರುವುದು ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು. ವಿರೋಧ ಪಕ್ಷಗಳ ಎಲ್ಲ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುತ್ತೇವೆ ಎಂದರು.

ಮಹದಾಯಿ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ರೀಓಪನ್‌ ಮಾಡುತ್ತಿರುವ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ, ‘ರೀ ಓಪನ್‌ ಮಾಡುತ್ತಿಲ್ಲ. ಪ್ರಕರಣಗಳನ್ನು ವಾಪಸ್‌ ತೆಗೆದುಕೊಳ್ಳುವ ಪ್ರಕ್ರಿಯೆ ನಡೆದಿದೆ ಎಂದರು.

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಚರ್ಚಿಸಲು ಸಭೆಯ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಬೊಮ್ಮಾಯಿ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT