ಸೋಮವಾರ, ಮಾರ್ಚ್ 20, 2023
30 °C

ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಸಂಜಯ ಶೆಟ್ಟೆಣ್ಣವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಜನಸಂಖ್ಯಾ ಸ್ಫೋಟದಿಂದ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪೂರ್ವಭಾವಿಯಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ, ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಭಾರತ ದೇಶದಲ್ಲಿ ಪ್ರತಿ ನಿಮಿಷಕ್ಕೆ 40, ಪ್ರತಿ ಗಂಟೆಗೆ 2403, ಪ್ರತಿ ದಿನಕ್ಕೆ 57,685 ಹಾಗೂ ಪ್ರತಿ ತಿಂಗಳ 13,84,457 ಮಕ್ಕಳ ಜನನವಾಗುತ್ತದೆ. ಜನಸಂಖ್ಯಾ ಸ್ಫೋಟದಿಂದ ಆಹಾರ, ನೀರು, ಬಟ್ಟೆ, ವಸತಿ ಕೊರತೆ ಉಂಟಾಗುವುದರ ಜೊತೆಗೆ ಶಿಕ್ಷಣ, ಆರೋಗ್ಯ ಸೇವೆಗಳು ಇತರೆ ಸಂಪನ್ಮೂಲ ಕೊರತೆಯು ಉಂಟಾಗುತ್ತದೆ. ವಾಯು, ಜಲ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುವುದರ ಜೊತೆಗೆ ಸಾಮಾಜಿಕ ಅಸಮಾನತೆ ತಲೆದೋರುತ್ತದೆ ಎಂದರು.

ಜನಸಂಖ್ಯಾ ಹತೋಟಿಗೆ ಮುಂಜಾಗ್ರತಾ ಕ್ರಮವಾಗಿ ಯುವಕರಿಗೆ 21 ವರ್ಷ ಹಾಗೂ ಯುವತಿಯರಿಗೆ 18 ವರ್ಷದ ನಂತರ ಮದುವೆ ಮಾಡಬೇಕು. ವಿವಾಹದ ನಂತರ ದಂಪತಿಗಳು ಕುಟುಂಬ ಕಲ್ಯಾಣದ ವಿಧಾನಗಳನ್ನು ಅನುಸರಿಸಿಕೊಂಡು ಚಿಕ್ಕಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು