ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಯು ಹಾಸಿಗೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಿ

ಸೋಂಕಿತರನ್ನು ಬೇರೆ ಆಸ್ಪತ್ರೆಗೆ ಹೋಗಿ ಎನ್ನುವಂತಿಲ್ಲ: ಜಿಲ್ಲಾಧಿಕಾರಿ ಖಡಕ್‌ ಸೂಚನೆ
Last Updated 22 ಸೆಪ್ಟೆಂಬರ್ 2020, 14:45 IST
ಅಕ್ಷರ ಗಾತ್ರ

ಹಾವೇರಿ: ಕೊರೊನಾ ಸೋಂಕಿನಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಬೆಡ್‍ಗಳ ಕೊರತೆಯಾಗದಂತೆ ಜಿಲ್ಲೆಯ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಐ.ಸಿ.ಯು. ಬೆಡ್‍ಗಳ ಸಂಖ್ಯೆಯನ್ನು ಮೂರು ದಿನಗೊಳಗಾಗಿ ಹೆಚ್ಚುವರಿ ವ್ಯವಸ್ಥೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಹಾಗೂ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ತಾಲ್ಲೂಕು ಆಡಳಿತದೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ತಕ್ಷಣ ಸ್ಪಂದಿಸಿ:ಕೋವಿಡ್ -19 ಸೋಂಕಿನಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಸೋಂಕಿತರನ್ನು ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಕೊರತೆ ಇದೆ. ಬೇರೆ ಆಸ್ಪತ್ರೆಗಳಿಗೆ ಹೋಗಿ ಎಂದು ಹೇಳುತ್ತಿರುವ ದೂರುಗಳು ಬರುತ್ತಿವೆ. ಈ ರೀತಿಯ ಯಾವುದೇ ದೂರುಗಳು ಬರಬಾರದು. ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ತಕ್ಷಣ ಸ್ಪಂದನೆ ಮಾಡಬೇಕು ಎಂದು ಸೂಚನೆ ನೀಡಿದರು.

ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಲ್ಲಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ. ಈ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಇರುವುದಿಲ್ಲ ಹಾಗೂ ಖಾಸಗಿ ಆಸ್ಪತ್ರೆಗಳ ಕೊರತೆ ಇದೆ. ಈ ಕೊರತೆ ನಡುವೆಯೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರಿ ವೈದ್ಯರು ಶ್ರಮಿಸುತ್ತಿರುವುದು ಉತ್ತಮ ಕಾರ್ಯ ಎಂದರು.

ಪಿ.ಜಿ. ವಿದ್ಯಾರ್ಥಿಗಳ ನಿಯೋಜನೆ:ಜಿಲ್ಲಾ ಮತ್ತು ತಾಲ್ಲೂಕು ಕೋವಿಡ್ ಆಸ್ಪತ್ರೆಗಳಿಗೆ ಅಗತ್ಯವಿರುವ ಸಂಖ್ಯೆಯಲ್ಲಿ ಶುಶ್ರೂಷಕರು, ಲ್ಯಾಬ್‍ ಟೆಕ್ನಿಷಿಯನ್‍ಗಳು, ಡಿ ವರ್ಗದ ಸಿಬ್ಬಂದಿ ಹಾಗೂ ವೈದ್ಯರ ಕೊರತೆ ನೀಗಿಸಲು ಪಿ.ಜಿ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಇವರ ಸೇವೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ, ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೆ 200 ಲೀಟರ್ ಆಕ್ಸಿಜನ್ ಕಂಟೇನರ್‌ಗಳನ್ನು ಸರಬರಾಜು ಮಾಡಲಾಗುವುದು. ಐ.ಸಿ.ಯು. ಬೆಡ್‍ಗಳನ್ನು ಹೆಚ್ಚಿಸಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ವಿಡಿಯೊ ಸಂವಾದ ಸಭೆಯಲ್ಲಿ ಹಾವೇರಿ ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್‌. ಹಾವನೂರ, ಹಾವೇರಿ ತಹಶೀಲ್ದಾರ್‌ ಶಂಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT