ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕಾರ್ಯ ಗಂಭೀರವಾಗಿ ಪರಿಗಣಿಸಿ

ವಿಡಿಯೊ ಸಂವಾದ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶೆಟ್ಟಣ್ಣವರ ಸೂಚನೆ
Last Updated 14 ಆಗಸ್ಟ್ 2020, 14:42 IST
ಅಕ್ಷರ ಗಾತ್ರ

ಹಾವೇರಿ: ಕೋವಿಡ್-19 ಪಾಸಿಟಿವ್ ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚುವುದು ಕಾರ್ಯ ಹಾಗೂ ಇವರನ್ನು ರ‍್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆಒಳಪಡಿಸುವ ಕೆಲಸವನ್ನು ಅತ್ಯಂತ ತ್ವರಿತವಾಗಿ ಹಾಗೂ ಆದ್ಯತೆಯ ಮೇಲೆ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಸೂಚನೆ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿಗಳು, ಪೊಲೀಸ್ ಹಾಗೂ ತಹಶೀಲ್ದಾರಗಳೊಂದಿಗೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುತ್ತಿವೆ. ಪಿ.ಎಸ್.ಐ. ಠಾಣಾ ವ್ಯಾಪ್ತಿಯಲ್ಲಿ ಸಂಪರ್ಕ ಪತ್ತೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಂತದಲ್ಲಿ ಸಂಪರ್ಕಿತರ ತಪಾಸಣೆಯನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳಿ ಎಂದರು.

ಅಸಮಾಧಾನ:ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಸಂಪರ್ಕ ಪತ್ತೆ ಕಾರ್ಯ ಹಾಗೂ ರ‍್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗಳು ನಿರೀಕ್ಷಿತ ಸಾಧನೆಯಾಗುತ್ತಿಲ್ಲ. ಜಿಲ್ಲೆಯ ಬಹಳಷ್ಟು ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿಗಳು ಕೋವಿಡ್ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸಂಪರ್ಕ ಪತ್ತೆ ಹಚ್ಚುವ ಕಾರ್ಯ ವಿಳಂಬವಾದಷ್ಟು ಸೋಂಕು ಹರಡುವಿಕೆ ಹೆಚ್ಚಾಗುತ್ತದೆ. ಸಂಪರ್ಕ, ತಪಾಸಣೆ, ಚಿಕಿತ್ಸೆ, ಕ್ವಾರಂಟೈನ್ ಗಂಭೀರತೆಯನ್ನು ಎಲ್ಲ ಅಧಿಕಾರಿಗಳು ಮನಗಾಣಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೋವಿಡ್‌ ಆಸ್ಪತ್ರೆಗೆ ನಿಯೋಜಿಸಿ:ಕೆಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಕೋವಿಡ್ ಕಾರ್ಯವನ್ನು ಗಂಭೀರವಾಗಿ ಪರಿಗಣಿಸದಿರುವುದು ಕಂಡುಬಂದಿದೆ. ಇಂತಹ ವೈದ್ಯಾಧಿಕಾರಿಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ನಿಯೋಜಿಸಿ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಯ ಕರ್ತವ್ಯದ ಜವಾಬ್ದಾರಿ ವಹಿಸಿ. ಇವರ ಸ್ಥಳದಲ್ಲಿ ಬಿ.ಎಂ.ಎಸ್. ವೈದ್ಯರನ್ನು ಕರ್ತವ್ಯಕ್ಕೆ ನಿಯೋಜಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಮಾತನಾಡಿ, ಠಾಣಾ ವ್ಯಾಪ್ತಿಯ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿ ವರದಿ ಮಾಡುವ ಜವಾಬ್ದಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಡಿ.ವೈ.ಎಸ್ಪಿ ವಿಜಯಕುಮಾರ ಸಂತೋಷ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪರಮೇಶ್ವರ ಎಸ್.ಹಾವನೂರ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT