ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ಹೆಗ್ಗುರಿ

₹ 504 ಕೋಟಿ ವೆಚ್ಚದಲ್ಲಿ 239 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ
Last Updated 25 ಫೆಬ್ರುವರಿ 2020, 9:06 IST
ಅಕ್ಷರ ಗಾತ್ರ

ಹಾವೇರಿ: ‘ಅತಿವೃಷ್ಟಿ ಮತ್ತು ನೆರೆಯಿಂದ ರಾಜ್ಯದಲ್ಲಿ ಅಪಾರ ಹಾನಿಯುಂಟಾಗಿದೆ. ಮನೆಗಳ ಹಾನಿ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಸಂಪನ್ಮೂಲವನ್ನು ಕ್ರೋಡೀಕರಿಸಬೇಕಾಗಿದೆ. ಆದರೂ, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಕ್ರಮ ವಹಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಹಾನಗಲ್ ತಾಲ್ಲೂಕಿನ ಬಾಳಂಬೀಡ ಪ್ರವಾಸಿ ಮಂದಿರದ ಆವರಣದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಜಿಲ್ಲೆಯ ಬಾಳಂಬೀಡ ಮತ್ತು ಹಿರೇಕಾಂಶಿ ಸೇರಿದಂತೆ 239 ಕೆರೆಗಳಿಗೆ ವರದಾ ನದಿಯಿಂದ ನೀರು ತುಂಬಿಸುವ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಕೃಷಿ ಜೊತೆಗೆ ಕೈಗಾರಿಕಾ ಕ್ಷೇತ್ರವು ಬೆಳವಣಿಗೆಯಾಗಬೇಕು. ರಾಜ್ಯಕ್ಕೆ ಹೊಸ ಹೊಸ ಉದ್ಯಮಿಗಳನ್ನು ಆಹ್ವಾನಿಸಬೇಕು. ಕೈಗಾರಿಕೆಗಳು ಸ್ಥಾಪನೆಯಾಗಬೇಕು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ಸರ್ಕಾರದ ಹೆಗ್ಗುರಿ’ ಎಂದು ಹೇಳಿದರು.

ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಈ ಭಾಗದ 20-30 ವರ್ಷಗಳ ಬೇಡಿಕೆಯಾದ ಕೆರೆ ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ತುಂಗಭದ್ರಾ ಹಾಗೂ ವರದಾ ನದಿಗಳಿಂದ ಕೆರೆಗಳಿಗೆ ನೀರು ತುಂಬಿಸಲು ಹಾವೇರಿ ಜಿಲ್ಲೆಯ ಬ್ಯಾಡಗಿ, ರಾಣೆಬೆನ್ನೂರು ಹಾಗೂ ಹಾನಗಲ್ ಕ್ಷೇತ್ರಗಳಿಗೆ ಅಂದಾಜು ₹ 1,500 ಕೋಟಿಗಳ ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಿದ್ದೇನೆ. ಈಗಾಗಲೇ ಕೆಲಸಗಳು ಆರಂಭಗೊಂಡಿವೆ. ಸರ್ಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೇನೆ, ಕೆಲಸ ಆರಂಭಗೊಂಡಿದೆ ಎಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ‘ನೀರಾವರಿ ಕನಸು ಎಲ್ಲರಿಗೂ ಸಿಗುವುದು ಮರೀಚಿಕೆ ಎಂಬ ಜನರ ಭಾವನೆಯನ್ನು ಯಡಿಯೂರಪ್ಪ ದೂರಮಾಡಿದ್ದಾರೆ.2008ರಲ್ಲಿ ಅಧಿಕಾರಕ್ಕೆ ಬಂದ ಐದು ವರ್ಷಗಳಲ್ಲಿ ₹ 18 ಸಾವಿರ ಕೋಟಿ ಖರ್ಚು ಮಾಡಿ 7 ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಿದರು. ಇದೊಂದು ದಾಖಲೆಯೇ ಸರಿ.ಆದರೆ, ನಂತರ ಬಂದ ಸರ್ಕಾರ ₹ 52 ಸಾವಿರ ಕೋಟಿ ಖರ್ಚು ಮಾಡಿ ಕೇವಲ 4 ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಿದರು ಎಂದು ಟೀಕಿಸಿದರು.

‌‘ಟೇಕ್‌ ಆಫ್‌ ಆಗಿಲ್ಲ’ ಎಂದು ಪದೇ ಪದೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸುತ್ತಾರೆ. ಅವರು ಮುಖ್ಯಮಂತ್ರಿಯಾದ ಒಂದೂವರೆ ವರ್ಷ ನಿದ್ದೆ ಮಾಡುವುದನ್ನು ಬಿಟ್ಟು ಮತ್ತೇನೂ ಮಾಡಲಿಲ್ಲ ಎಂದು ತಿರುಗೇಟು ನೀಡಿದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ‘ಅಧಿಕಾರ ವಹಿಸಿಕೊಂಡ ಕೇವಲ 78 ದಿನಗಳಲ್ಲಿ ಜಿಲ್ಲೆಗೆ ಬೃಹತ್ ಎರಡು ಯೋಜನೆಗಳನ್ನು ಮಂಜೂರು ಮಾಡಿದ್ದಾರೆ. ನೂರು ದಿನಗಳಲ್ಲಿ ನನ್ನ ಸಂಸತ್ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ 2000 ಕೋಟಿಗೂ ಹೆಚ್ಚು ಹಣ ಮಂಜೂರು ಮಾಡಿದ್ದಾರೆ. ಶಿವಮೊಗ್ಗ, ರಾಣೇಬೆನ್ನೂರು, ಗದಗ ರೈಲ್ವೆ ಮಾರ್ಗಕ್ಕೆ ಅನುದಾನ ಒದಗಿಸಿದ್ದಾರೆ. ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. ಮುಂದಿನ ಬಜೆಟ್‍ನಲ್ಲಿ ಹಿಂದುಳಿದ ಜಿಲ್ಲೆ ಹಾವೇರಿ ಹಾಗೂ ಗದಗ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿಕೊಂಡರು.

ಶಾಸಕ ಸಿ.ಎಂ.ಉದಾಸಿ ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ಬಿ.ಸಂಕನೂರ, ಮಾಜಿ ಶಾಸಕ ಶಿವರಾಜ ಸಜ್ಜನ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿದ್ದರಾಜ ಕಲಕೋಟಿ, ಹಾನಗಲ್ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಕರೆಯಪ್ಪ ಎರಗಪ್ಪನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT