ನಿತ್ಯ 3 ಸಾವಿರ ಪರೀಕ್ಷೆ ಕಡ್ಡಾಯ: ಬಸವರಾಜ ಬೊಮ್ಮಾಯಿ ಸೂಚನೆ

ಹಾವೇರಿ: ಹಳ್ಳಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದರೆ ಲಾಕ್‌ಡೌನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿ ಅವರು ಮಾತನಾಡಿದರು. ಎಲ್ಲ ಹಳ್ಳಿಗಳಿಗೆ ದೊಡ್ಡ ಪ್ರಮಾಣದಲ್ಲಿ ಔಷಧ ವಿತರಿಸಬೇಕು. ಸೋಂಕಿತರಿಗೆ 14 ದಿನಗಳ ನಂತರ ಮರು ಪರೀಕ್ಷೆ ನಡೆಸಿ, ಕೋವಿಡ್ ಕೇರ್ ಸೆಂಟರ್‌ನಲ್ಲಿ ಪ್ರತ್ಯೇಕವಾಗಿರಿಸಿ. ದಿನಕ್ಕೆ 3000 ಟೆಸ್ಟ್ ಮಾಡಲೇಬೇಕು ಎಂದು ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಸಕಲ ಸೌಲಭ್ಯ ನೀಡಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಸಾವಿಗೀಡಾಗುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ನಿಷ್ಕಾಳಜಿಯೇ ಕಾರಣ. ಬೇಜವಾಬ್ದಾರಿ ಮತ್ತು ಕರ್ತವ್ಯಲೋಪ ಎಸಗುವ ಅಧಿಕಾರಿಗಳನ್ನು ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡಿ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಆದೇಶಿಸಿದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೇವೆ ಆರಂಭಿಸಲು ಅರಿವಳಿಕೆ ಹಾಗೂ ತಜ್ಞ ವೈದ್ಯರ ಅಗತ್ಯವಿದೆ. ಎಲ್ಲೆಲ್ಲಿ ತಜ್ಞ ವೈದ್ಯರು ಕರ್ತವ್ಯಕ್ಕೆ ಹಾಜರಾಗುತ್ತಾರೋ ಆಯಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸೇವೆ ಆರಂಭಿಸಲಾಗುವುದು ಎಂದರು.
ಲಾಕ್‌ಡೌನ್ ಉಲ್ಲಂಘನೆ: ತನಿಖೆಗೆ ಸೂಚನೆ
ಹಾವೇರಿ: ಪೂರ್ಣ ಲಾಕ್‌ಡೌನ್ ಜಾರಿಯಿದ್ದರೂ, ಮೇ 31ರಂದು ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ, ಜಿಲ್ಲಾ ಮಟ್ಟ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸುಮಾರು 150 ಮಂದಿ ಒಂದೆಡೆ ಸೇರಿ ಅದ್ಧೂರಿಯಾಗಿ ಬೀಳ್ಕೊಡುಗೆ ಸಮಾರಂಭ ನಡೆಸಿದ್ದರು.
ಈ ಕುರಿತು ಕೇಳಿದ ಪತ್ರಕರ್ತರ ಪ್ರಶ್ನೆಗೆ, ‘ಈ ಘಟನೆ ಕುರಿತು ಜಿಲ್ಲಾಧಿಕಾರಿ ತನಿಖೆ ನಡೆಸಿ, ವರದಿ ನೀಡಲು ಸೂಚಿಸುತ್ತೇನೆ’ ಎಂದು ಸಚಿವ ಬಸವರಾಜ ಬೊಮ್ಮಾಯಿ ಉತ್ತರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.