ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಪ್ಪಲಿ ಎಸೆತ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ರಂಭಾಪುರಿ ಶ್ರೀ ಆಗ್ರಹ

Published 20 ಫೆಬ್ರುವರಿ 2024, 14:10 IST
Last Updated 20 ಫೆಬ್ರುವರಿ 2024, 14:10 IST
ಅಕ್ಷರ ಗಾತ್ರ

ಶಿಗ್ಗಾವಿ: ‘ಬಾಗಲಕೋಟೆ ಜಿಲ್ಲೆ ಕಲಾದಗಿ ಗ್ರಾಮದಲ್ಲಿ ನಡೆದ ಘಟನೆಯಿಂದ (ಚಪ್ಪಲಿ ಎಸೆತ ಪ್ರಕರಣ) ಪೀಠಕ್ಕೆ ಮಾತ್ರವಲ್ಲ, ಇಡೀ ನಾಡಿನ ಜನತೆಗೆ ಕಪ್ಪುಚುಕ್ಕೆಯಾಗಿದೆ. ತಕ್ಷಣ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.

ತಾಲ್ಲೂಕಿನ ಬಂಕಾಪುರ ಪಟ್ಟಣದ ಅರಳೆಲೆಮಠದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‌‌‌‘ನ್ಯಾಯಾಲಯದ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಆದರೂ ಕೆಲವು ಕಿಡಿಗೇಡಿಗಳು ತಾಳ್ಮೆ ಇಲ್ಲದೆ ನೀಚಕೃತ್ಯ ಎಸಗಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದ ಸುಮಾರು 59 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಣದ ಕೈಗಳು ಆರೋಪಿಗಳನ್ನು ದೋಷ ಮುಕ್ತಗೊಳಿಸಲು ಹುನ್ನಾರ ನಡೆಸಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಬಾಗಲಕೋಟಿ ಜಿಲ್ಲೆ ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನಮಠ ರಂಭಾಪುರಿ ಪೀಠದ ಶಾಖಾ ಮಠವಾಗಿದೆ. ಎಂಟು ವರ್ಷಗಳ ಹಿಂದೆ ಈ ಮಠದ ಸ್ವಾಮೀಜಿ ಅವರು ಲಿಂಗೈಕ್ಯರಾದ ನಂತರ ಅಲ್ಲಿನ ಆಡಳಿತ ನಡೆಸಲು ಒಬ್ಬ ವಟುವನ್ನು ನೇಮಿಸಲಾಗಿತ್ತು. ಆದರೆ ಕೆಲವರು ವಿರೋಧ ವ್ಯಕ್ತಪಡಿಸಿ, ನ್ಯಾಯಾಲಯಕ್ಕೆ ಹೋಗಿದ್ದಾರೆ. ಹೀಗಾಗಿ ಈಗಿನ ಶ್ರೀಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸಂಬಂಧಿಸಿದ ಇಲಾಖೆಗಳಿಗೆ ನ್ಯಾಯಾಲಯ ಆದೇಶ ಮಾಡಿದೆ ಎಂದರು.

ಬಾಗಲಕೋಟೆ ಜಿಲ್ಲೆ ಉದಗಟ್ಟಿ ಗ್ರಾಮದಲ್ಲಿ ನಡೆಯಲಿರುವ ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಹೊರಟಿರುವ ಸಂದರ್ಭದಲ್ಲಿ ಕಲಾದಗಿ ಗ್ರಾಮದ ಮಾರ್ಗದಲ್ಲಿ ನಾವು ಹಾದು ಹೋದ ನಂತರ ಕಲಾದಗಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಸ್ಪಷ್ಟಪಡಿಸಿದರು. 

ಬಂಕಾಪುರ ಅರಳೆಲೆಮಠದ ರೇವಣಸಿದ್ದೇಶ್ವರ ಸ್ವಾಮೀಜಿ, ಪ್ರಾಧ್ಯಾಪಕ ಗುರುಪಾದಯ್ಯ ಸಾಲಿಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT