ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂರಿಯಾ ಅಕ್ರಮ: ತನಿಖಾ ತಂಡ ರಚಿಸಿ

ಜಿಲ್ಲಾ ಕೋವಿಡ್‌ ಆಸ್ಪತ್ರೆ ವೈದ್ಯಕೀಯ ಸೌಲಭ್ಯ ಉನ್ನತೀಕರಿಸಿ: ಸಚಿವ ಬೊಮ್ಮಾಯಿ
Last Updated 8 ಆಗಸ್ಟ್ 2020, 15:51 IST
ಅಕ್ಷರ ಗಾತ್ರ

ಹಾವೇರಿ: ಕೋವಿಡ್‌ನಿಂದ ಮರಣ ಹೊಂದುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಬೇಕು. ಹಾವೇರಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ವ್ಯವಸ್ಥೆ, ಹೆಚ್ಚುವರಿ ಹಾಸಿಗೆ ಸೌಲಭ್ಯ, ವೈದ್ಯಕೀಯ ಸೇವೆಗಳಲ್ಲಿ ಸುಧಾರಣಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.

ಕೋವಿಡ್ ಹಾಗೂ ಮಳೆಹಾನಿ, ನೆರೆ ನಿರ್ವಹಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದರು. ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಯಾರಾದರೂ ನಿರ್ಲಕ್ಷ್ಯವಹಿಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ. ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿ ಎಂದು ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ತಾಂತ್ರಿಕ ತಜ್ಞರೊಂದಿಗೆ ಚರ್ಚಿಸಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೈಪ್ರೋ ಆಕ್ಸಿಜನ್ ವ್ಯವಸ್ಥೆಯ ಸೌಲಭ್ಯಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಿ. ಪ್ರತಿ ತಾಲ್ಲೂಕಿನಆಸ್ಪತ್ರೆಗಳಲ್ಲಿ 50 ಹಾಸಿಗೆಗಳ ಕೇಂದ್ರೀಕೃತ ಪ್ರೆಸರೈಸ್ ಆಕ್ಸಿಜನ್ ಪೂರೈಕೆಯ ಬೆಡ್ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಗೋದಾಮು ಪರಿಶೀಲಿಸಿ:ಕೆಲ ಮಾರಾಟಗಾರರು ಹಂಚಿಕೆಯಾದ ಯೂರಿಯಾ ರಸಗೊಬ್ಬರವನ್ನು ರೈತರಿಗೆ ವಿತರಿಸದೆ ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸಿ ದುಬಾರಿ ದರದಲ್ಲಿ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ. ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕು. ಎಲ್ಲ ಗೋದಾಮುಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಬೇಕು. ಈ ಉದ್ದೇಶಕ್ಕಾಗಿ ತ್ವರಿತವಾಗಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದರು.

ಏಜೆಂಟರನ್ನು ನಿಯಂತ್ರಿಸಿ:ಮನೆ ಪರಿಹಾರ ವಿತರಣೆಯಲ್ಲಿ ಯಾವುದೇ ದೂರುಗಳು ಬರಬಾರದು. ತಹಶೀಲ್ದಾರ್‌ಗಳಿಗೆ ನೀಡುವ ಲಾಗಿನ್‍ಗಳನ್ನು ಕೆಳಹಂತದ ಸಿಬ್ಬಂದಿ ದುರುಪಯೋಗ ಮಾಡಿಕೊಳ್ಳದಂತೆ ಎಚ್ಚರವಹಿಸಬೇಕು. ಮನೆ ಪರಿಹಾರ ಪಡೆಯುವಲ್ಲಿ ಏಜೆಂಟರ ಪಾತ್ರ ಕಂಡುಬಂದರೆ ಅಂತಹ ಅಧಿಕಾರಿಗಳನ್ನು ಖಂಡಿತ ಉಳಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ, ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT