ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ವೈರಾಣು ಪ್ರಯೋಗಾಲಯ, ಐಸಿಯು ಉದ್ಘಾಟನೆ

ಐದು ಹೊಸ ವೆಂಟಿಲೇಟರ್‌ಗಳಿಗೆ ಪ್ರಸ್ತಾವ: ಸಚಿವ ಬಸವರಾಜ ಬೊಮ್ಮಾಯಿ
Last Updated 15 ಜೂನ್ 2020, 15:11 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯ (ವಿಆರ್ಡಿಎಲ್) ಹಾಗೂ ಐಸಿಯುವಾರ್ಡ್‌ಗಳನ್ನುಸೋಮವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ, ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ವಿಆರ್ಡಿಲ್ಯಾಬ್ ಹಾಗೂ ಐಸಿಯು ವಾರ್ಡ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದರೂ ಎಲ್ಲ ಸವಾಲುಗಳನ್ನು ಎದುರಿಸಲು ಎಲ್ಲ ರೀತಿಯಿಂದಲೂ ಸಮರ್ಥವಾಗಿದ್ದೇವೆ. ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವೈದ್ಯಕೀಯ ವ್ಯವಸ್ಥೆಗಳು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 16 ವೆಂಟಿಲೇಟರ್‌ ಐ.ಸಿ.ಯು. ವ್ಯವಸ್ಥೆ ಮಾಡಲಾಗಿದೆ. ಹೊಸದಾಗಿ ಐದು ವೆಂಟಿಲೇಟರ್ ಬೇಡಿಕೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ವಿಶೇಷವಾಗಿ ಕೋವಿಡ್ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 50 ಬೆಡ್ ಹಾಗೂ ಸವಣೂರಲ್ಲಿ 30 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ 10ರಿಂದ 15 ಬೆಡ್‍ಗಳ ಸೇರ್ಪಡೆಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಕೋವಿಡ್ ಲ್ಯಾಬ್ ಸ್ಥಾಪನೆಗೆಗ ಎಸ್.ಡಿ.ಆರ್.ಎಫ್.ನಲ್ಲಿ ವಿ.ಆರ್.ಡಿ.ಉಪಕರಣಕ್ಕೆ ಅನುಮತಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ, ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ ಅವರಿಗೆ ಧನ್ಯವಾದ ಸಲ್ಲಿಸಿದರು.

ವೈದ್ಯಕೀಯ ಕಾಲೇಜು ಶಂಕುಸ್ಥಾಪನೆ:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ಮೇಲೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ಉದ್ದೇಶಿತ ಹಾವೇರಿ ವೈದ್ಯಕೀಯ ವಿಜ್ಞಾನ ಕಾಲೇಜಿನ ಶಂಕುಸ್ಥಾಪನೆ ಕಾರ್ಯ ನೆರವೇರಿಸಲಾಗುವುದು ಎಂದು ತಿಳಿಸಿದರು.

ಕಠಿಣ ಕ್ರಮ:ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು ಸೇರಿದಂತೆ ಯಾರ ಮೇಲಾದರೂ ಹಲ್ಲೆ ಸೇರಿದಂತೆ ದೌರ್ಜನ್ಯ ನಡೆದರೆ, ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಂಸದ ಶಿವಕುಮಾರ ಉದಾಸಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ,. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಪ್ರಭಾರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಎಸ್. ಹಾವನೂರ, ಆರ್‌.ಎಂ.ಒ. ಡಾ.ಸುರೇಶ ಪೂಜಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT