ಸೋಮವಾರ, ಜುಲೈ 26, 2021
26 °C
ವಿಶ್ವ ಪರಿಸರ ದಿನಾಚರಣೆಯಲ್ಲಿ ಶಾಸಕ ನೆಹರು ಓಲೇಕಾರ ಅಭಿಮತ

ಅಭಿವೃದ್ಧಿ ನೆಪದಲ್ಲಿ ಅರಣ್ಯ ನಾಶ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಅಭಿವೃದ್ಧಿ ನೆಪದಲ್ಲಿ ಅರಣ್ಯ ನಾಶವಾಗುತ್ತಿದೆ ಹಾಗೂ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಮನುಷ್ಯ ಸೇರಿದಂತೆ ಪ್ರಾಣಿ-ಪಕ್ಷಿ ಸಂಕುಲಕ್ಕೂ ತೊಂದರೆಯಾಗುತ್ತಿದೆ. ಪರಿಸರ ನಾಶವನ್ನು ತಡೆಯಬೇಕು’ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ನಂದಿ ಲೇಔಟ್ ಪಾರ್ಕ್‍ನಲ್ಲಿ ಶುಕ್ರವಾರ ಅರಣ್ಯ ಇಲಾಖೆ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಅರಣ್ಯ ಇಲಾಖೆ ನಗರವನ್ನು ಹಸಿರೀಕರಣ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಾಕಿಕೊಂಡಿದೆ. ಈ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಮರವಾಗಿ ಬೆಳೆಸಬೇಕು. ಅರಣ್ಯ ಇಲಾಖೆಯಿಂದ ನೆಡುವ ಸಸಿಗಳನ್ನು ಸಹ ಕಾಳಜಿಯಿಂದ ನೋಡಿಕೊಳ್ಳಬೇಕು. ನಿಸರ್ಗ ಸಂಪತ್ತು ಹೆಚ್ಚಿದರೆ ಜೀವಸಂಕುಲ ಸಂತೃಪ್ತವಾಗಿರುತ್ತವೆ. ಪ್ರಾಣಿ-ಪಕ್ಷಿ ಸಂಕುಲ ಹಾಗೂ ನಾಡು ಸಂಪದ್ಭರಿತವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮಾತನಾಡಿ, ಪರಿಸರ ವೈಪರೀತ್ಯದಿಂದ ನಾವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ‘ವರದಾ ಸಿರಿ’ ಎಂಬ ಹೊಸ ಯೋಜನೆ ರೂಪಿಸಿ ಜಿಲ್ಲೆಯಾದ್ಯಂತ ಹಸಿರೀಕರಣ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವರದಾ ನದಿಯ ದಂಡೆಯಲ್ಲಿ 123 ಕಿ.ಮೀ. ಸಸಿ ನೆಡುವುದು ಮತ್ತು ನದಿ ದಡದಲ್ಲಿ ರೈತರ ಸಹಭಾಗಿತ್ವದಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ರೈತರ ಹೊಲದಲ್ಲಿ ಸಸಿ ಹಚ್ಚುವ ಕೆಲಸ ಮಾಡಲಾಗುತ್ತಿದೆ’ ಎಂದರು. 

ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ ಕ್ರಾಂತಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ನಗರಸಭೆ ಆಯುಕ್ತ ಬಸವರಾಜ ಜಿದ್ದಿ, ಡಿವೈಎಸ್ಪಿ ವಿಜಯಕುಮಾರ ಸಂತೋಷ, ಡಿ.ಎಫ್.ಒ ಕೆ. ದಯಾನಂದಕುಮಾರ, ಎ.ಸಿ.ಎಫ್ ಅಶೋಕ ಗೊಂಡೆ, ಆರ್.ಎಫ್.ಓ ಮಂಜುನಾಥ ಬಾಗೇವಾಡಿ, ಪರಿಸರ ಅಧಿಕಾರಿ ಮಹೇಶ್ವರಪ್ಪ, ನಗರಸಭೆ ಸದಸ್ಯೆ ಲಲಿತಾ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.