ಸೋಮವಾರ, ಫೆಬ್ರವರಿ 24, 2020
19 °C
ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ವಾಪಸ್ ಪಡೆಯಲು ಮನವಿ

ಶಿಕ್ಷಣ ವ್ಯವಸ್ಥೆ ಬಲಗೊಳಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣದಲ್ಲಿ ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆ ಪದಾಧಿಕಾರಿಗಳು ತಹಶೀಲ್ದಾರ್ ಅವರಿಗೆ ಮನವಿ ಪತ್ರ ನೀಡಿದರು

ಚನ್ನಪಟ್ಟಣ: ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸಿರುವ ಸರ್ಕಾರ ತನ್ನ ತೀರ್ಮಾನ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸರ್ಕಾರಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮನ್ವಯ ವೇದಿಕೆ (ಎಸ್.ಡಿ.ಎಂ.ಸಿ.) ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರ 28,847 ಸರ್ಕಾರಿ ಶಾಲೆಗಳನ್ನು 8,530 ಶಾಲೆಗಳ ಜೊತೆ ವಿಲೀನ ಮಾಡುವ ನಿರ್ಧಾರ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣದ ಬಗ್ಗೆ ಇದ್ದ ಎಲ್ಲ ನಿರೀಕ್ಷೆಗಳನ್ನು ಹುಸಿ ಮಾಡಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ವೇಗವಾಗಿ ನಾಶ ಮಾಡುವ ಹುನ್ನಾರ ಇದಾಗಿದೆ ಎಂದು ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ಶಂಭುಗೌಡ ಹಾಗೂ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಒಂದು ಸಾವಿರ ಸರ್ಕಾರಿ ಆಂಗ್ಲ ಶಾಲೆಗಳನ್ನು ತೆರೆಯಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮ. ಆದರೆ, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸಲು ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಬಹುದಿತ್ತು. ಆಂಗ್ಲ ಭಾಷೆ ಪರಿಣಾಮಕಾರಿಯಾಗಿ ಬೋಧಿಸಲು ಅಗತ್ಯವಾದ ಆಂಗ್ಲಭಾಷಾ ಶಿಕ್ಷಕರನ್ನು ನೇಮಿಸಲು ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ಒತ್ತಾಯಿಸಿದರು.

ರಾಜ್ಯದ ಸುಮಾರು 4,100 ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಅಂಗಳಗಳಿಗೆ ಹಂತ ಹಂತವಾಗಿ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಬಲವರ್ಧಿಸುವ ಪ್ರಸ್ತಾಪ‍ ಸ್ವಾಗತಾರ್ಹ ಕ್ರಮ. ಆದರೆ, ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ ಪ್ರಕಾರ ಮೂರು ವರ್ಷ ಮೇಲ್ಪಟ್ಟ ಮಕ್ಕಳನ್ನು ಪ್ರಾಥಮಿಕ ಶಿಕ್ಷಣಕ್ಕೆ ಅಣಿಗೊಳಿಸುವ ಭಾಗವಾಗಿ ಸರ್ಕಾರ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಬಾಲಸ್ನೇಹಿ ಕೇಂದ್ರಗಳ ಬದಲು ಪೂರ್ಣ ಪ್ರಮಾಣದ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಬೇಕಿದೆ ಎಂದು ಮನವಿ ಮಾಡಿದರು.

ತಾಲ್ಲೂಕು ಎಸ್.ಡಿ.ಎಂ.ಸಿ. ಕಾರ್ಯದರ್ಶಿ ಕೆ.ಎಲ್.ರಾಜು ಪಟೇಲ, ಪದಾಧಿಕಾರಿ ಎಚ್.ಆರ್ ರಮೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)