ಶುಕ್ರವಾರ, ಜೂನ್ 18, 2021
27 °C

ವಿದ್ಯಾರ್ಥಿ ವೇತನ: ಸಿಯುಕೆ ವಿರುದ್ಧ ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 5 ವರ್ಷಗಳಿಂದ ವಿದ್ಯಾರ್ಥಿ ವೇತನ ವಿತರಿಸದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

2013–14 ರಿಂದ 2017–18ರ ವರೆಗಿನ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿಗಳಿಗೆ ಮಂಜೂರು ಮಾಡಿದ್ದ ವಿದ್ಯಾರ್ಥಿ ವೇತನವನ್ನು ಸರಿಯಾಗಿ ವಿತರಿಸಿಲ್ಲ. ಇನ್ನೂ ₹1 ಕೋಟಿ ವಿದ್ಯಾರ್ಥಿ ವೇತನ ಬಾಕಿ ಇದೆ. ಈ ಬಗ್ಗೆ ಇಲಾಖೆ ನೋಟಿಸ್ ನೀಡಿದ್ದರೂ ಕುಲಪತಿ ಹಾಗೂ ಕುಲಸಚಿವರು ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಿದರು.

ವಿಮೆ ಹೆಸರಿನಲ್ಲಿ ವಿಶ್ವವಿದ್ಯಾಲಯ ಹಣ ದೋಚಿದೆ. ಈ ಹಿಂದೆ ವಿಶ್ವವಿದ್ಯಾಲಯದ ಹಣ ₹1,200 ಹಾಗೂ ವಿದ್ಯಾರ್ಥಿಗಳ ಹಣ ₹1,100 ಸೇರಿ ಒಬ್ಬ ವಿದ್ಯಾರ್ಥಿಗೆ ₹2,300 ರಂತೆ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ರೀತಿಯಾಗಿ ಪ್ರತಿ ವರ್ಷ ₹30 ಲಕ್ಷಕ್ಕೂ ಅಧಿಕ ಹಣ ದುರ್ಬಳಕೆಯಾಗಿದೆ. ಅತಿಥಿಗೃಹ ಸೇರಿದಂತೆ ವಿಶ್ವವಿದ್ಯಾಲಯದ ಹಲವಾರು ಕಟ್ಟಡಗಳಳಿಗೆ ಪೀಠೋಪಕರಣಗಳನ್ನು ಖರೀದಿಸಲಾಗಿದೆ. ಆದರೆ, ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿಲ್ಲ. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ವಿಶ್ವವಿದ್ಯಾಲಯದ ಆವರಣದಲ್ಲಿ ಈಚೆಗೆ ನಡೆದ ಕೊಲೆಯಿಂದಾಗಿ ಭಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ವಿಶ್ವವಿದ್ಯಾಲಯ ಆವರಣದಲ್ಲಿ ಪೊಲೀಸ್ ಠಾಣೆಯನ್ನು ತೆರೆಯಬೇಕು. ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿರುದ್ಧ ಹೋರಾಟ ಮಾಡಬಾರದು ಎಂಬ ಸಹಿಯೊಂದಿಗೆ ಪ್ರವೇಶ ನೀಡಿರುವ ಪದ್ಧತಿಯನ್ನು ಮುಂದೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ಧ ಜಾಡರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು