ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಲಬರ್ಗಾ ವಿಶ್ವವಿದ್ಯಾಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

Published 8 ಆಗಸ್ಟ್ 2023, 13:42 IST
Last Updated 8 ಆಗಸ್ಟ್ 2023, 13:42 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ವರೆಗೆ ರ್‍ಯಾಲಿ ನಡೆಸಿದರು. ಅನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

1984ರಲ್ಲಿ ಸ್ಥಾಪನೆಯಾದ ಗುಲಬರ್ಗಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದೆ. ಶಿಕ್ಷಣದ ಕಾಶಿ, ಅಕ್ಷರ ದಾಸೋಹದ ಮಂದಿರ’ ಆಗುವುದರ ಬದಲು ಭ್ರಷ್ಟಾಚಾರಕ್ಕೆ ಹೆಸರಾಗಿದೆ. ಆಡಳಿತ ವ್ಯವಸ್ಥೆ ಸಂಪೂರ್ಣ ಅಧೋಗತಿಗೆ ತಲುಪಿದೆ. ಪಾರದರ್ಶಕ ಆಡಳಿತ ನೀಡುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡ ಅದನ್ನು ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದೆ. ಭ್ರಷ್ಟಾಚಾರ ಬಲಿತು ಹೋಗಿರುವುದರಿಂದ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಆರೋಪಿಸಿದರು.

‘ಸಕಾಲಕ್ಕೆ ಪರೀಕ್ಷೆಗಳು ನಡೆಯುತ್ತಿಲ್ಲ. ಉದ್ದೇಶಪೂರ್ವಕವಾಗಿ ಅಂಕಪಟ್ಟಿಗಳಲ್ಲಿ ಶೂನ್ಯ ಅಂಕ ಹಾಕುತ್ತಿದ್ದಾರೆ. ಆವಕ ಶಾಖೆಯಲ್ಲಿ ಕೊಟ್ಟ ಅರ್ಜಿಗಳನ್ನು ನೋಡುವವರು ಯಾರೂ ಇಲ್ಲ. ವಿದ್ಯಾರ್ಥಿಗಳ ಅರ್ಜಿಗಳನ್ನು ಯಾರೂ ನೋಡುತ್ತಿಲ್ಲ. ಅದಕ್ಕೆ ಪರಿಹಾರ ಕಲ್ಪಿಸುತ್ತಿಲ್ಲ. ಕುಂಟು ನೆಪವೊಡ್ಡಿ ಅಂತಿಮ ಪದವಿ ವಿದ್ಯಾರ್ಥಿಗಳ ಫಲಿತಾಂಶ ತಡೆ ಹಿಡಿಯಲಾಗಿದೆ. ಪದವಿ ಪರೀಕ್ಷಾ ಕೇಂದ್ರಗಳಿಗೆ ಅರ್ಹರಲ್ಲದವರನ್ನು ಬಾಹ್ಯ ಮೇಲ್ವಿಚಾರಕರಾಗಿ ನೇಮಿಸಲಾಗಿದೆ. ನಿಯಮ ಮೀರಿ ಹೊಸ ಪದವಿ ಕಾಲೇಜುಗಳಿಗೆ ಅನುಮತಿ ನೀಡಲಾಗುತ್ತಿದೆ’ ಎಂದು ದೂರಿದರು.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ವಿಶ್ವವಿದ್ಯಾಲಯದ ಸರಿದಾರಿಗೆ ತರಲು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಇನ್ನಷ್ಟು ಭ್ರಷ್ಟಾಚಾರದಲ್ಲಿ ಮುಳುಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಪರಿಷತ್ತಿನ ನಗರ ಘಟಕದ ಕಾರ್ಯದರ್ಶಿ ಅಂಬ್ರೇಶ ಬಿರಾದಾರ, ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೆ, ಸಿದ್ಧಾರ್ಥ ಬಾವಿದೊಡ್ಡಿ, ವಿಶಾಲ, ದರ್ಶನ, ಸತೀಶ, ಅಮರ, ಸ್ವಾತಿ, ಪ್ರೇಮಾ, ವಿವಿಧ ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT