ಭಾನುವಾರ, ಜುಲೈ 3, 2022
27 °C

ಕಲಬುರ್ಗಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕೊರೊನಾದಿಂದ ತತ್ತರಿಸಿರುವ ವಿದ್ಯಾರ್ಥಿಗಳಿಗೆ ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ವಸತಿ ನಿಲಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆದು ಅರ್ಜಿ ಸಲ್ಲಿಸಿದ ಎಲ್ಲರಿಗೂ ಪ್ರವೇಶ ನೀಡಬೇಕು ಹಾಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ರಾಜ್ಯದ ಬಡ–ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಹಾಗೂ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣಕ್ಕೆ ಪ್ರೋತ್ಸಾಹ ಕೊಡುವ ದೃಷ್ಟಿಯಿಂದ ಸರ್ಕಾರ ನೀಡುತ್ತಿದ್ದ ಕೆಲ ವಿದ್ಯಾರ್ಥಿ ವೇತನಗಳು ಕೊರೊನಾ ಕಷ್ಟಕಾಲದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಅಲ್ಲದೇ, ವಸತಿ ನಿಲಯಗಳು ತೆರೆಯದಿರುವುದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸುಮಾರು ಎಂಟು ತಿಂಗಳ ಬಳಿಕ ಶಾಲಾ ಕಾಲೇಜುಗಳು ಆರಂಭವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ನಗರಗಳಿಗೆ ಬರುತ್ತಿದ್ದಾರೆ. ಆದರೆ, ವಸತಿ ನಿಲಯಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಸತಿಗೆ ಅವಕಾಶವಿದ್ದು, ಉಳಿದ ತರಗತಿಗಳ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಅವರು
ಆಗ್ರಹಿಸಿದರು.

ವಿವಿಧ ವಿಷಯಗಳನ್ನು ಬೋಧಿಸಲು ಖಾಲಿ ಹುದ್ದೆಗಳಿಗೆ ತಕ್ಷಣ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಅವರಿಗೆ ವರ್ಷದ ಎಲ್ಲ ತಿಂಗಳೂ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ತೋಟಪ್ಪ ದೇಸಾಯಿ, ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಬಟಗೇರಾ ನೇತೃಯ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು