ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಲೂರು, ಹಳೇಬೀಡು ಅಭಿವೃದ್ಧಿಗೆ ₹ 30 ಕೋಟಿ

25ಕ್ಕೆ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರವಾಸೋದ್ಯಮ ಇಲಾಖೆ ಸಭೆ
Last Updated 19 ಜೂನ್ 2018, 12:47 IST
ಅಕ್ಷರ ಗಾತ್ರ

ಹಾಸನ: ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಹೇಳಿದರು.

ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ₹ 30 ಕೋಟಿ ವೆಚ್ಚದಲ್ಲಿ ಬೇಲೂರು, ಹಳೇಬೀಡು ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯ ಎಚ್.ಡಿ. ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ನಿರ್ದೇಶನ ನೀಡಿದ್ದಾರೆ. ಬೇಲೂರು ದೇವಾಲಯದ ಸುತ್ತ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಅಂದಾಜು ₹ 19 ಕೋಟಿ ವೆಚ್ಚದ ಯೋಜನೆ ಸಿದ್ಧ ಪಡಿಸಲಾಗಿದೆ. ಎರಡೂ ಕ್ಷೇತ್ರ ಸೇರಿ ಒಟ್ಟಾರೆ ₹ 30 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಮೊದಲ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ವಿವರಿಸಿದರು.

ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ 15 ದಿನಗಳಲ್ಲಿ 2 ಬಾರಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಪರಾಮರ್ಶೆ ನಡೆಸಲಾಗಿದೆ. ಮುಂದಿನ 6 ತಿಂಗಳೊಳಗೆ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪ್ರಾರಂಭಿಸಲಾಗುವುದು ಎಂದು ನುಡಿದರು.

ಬೇಲೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆ, ರಸ್ತೆ ವಿಸ್ತರಣೆ, ಪ್ರವಾಸಿ ಮಾಹಿತಿ ಕೇಂದ್ರದ ಬಲವರ್ಧನೆ ಕ್ಯಾಂಟೀನ್ ಸೌಲಭ್ಯ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಬೇಲೂರು ದೇವಾಲಯಕ್ಕೆ 900 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಶೇಷ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಹೊಯ್ಸಳ ಮಹೋತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಪುರಾತತ್ವ ಇಲಾಖೆ ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪ್ರವಾಸಿ ತಾಣಗಳ ಜಾಗ ಒತ್ತುವರಿ, ಮೂಲಭೂತ ಸೌಕರ್ಯ ಕಲ್ಪಿಸುವ ಕಡೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಶೌಚಾಲಯಕ್ಕೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ಮೂಲ ಸೌಕರ್ಯಗಳ ಪೂರೈಕೆಗೆ ಗಮನ ಹರಿಸಲಾಗುವುದು. ಬೇಲೂರಿನಲ್ಲಿ ಹಾಲಿ ವಸತಿ ಸೌಲಭ್ಯದ ಕೊರತೆ ನೀಗಿಸಲಾಗುವುದು ಎಂದು ಸಚಿವರು ಹೇಳಿದರು.

ಶಾಸಕ ಕೆ.ಎಸ್ ಲಿಂಗೇಶ್, ಪುರಸಭಾ ಅಧ್ಯಕ್ಷೆ ಭಾರತಿ, ಪ್ರವಾಸೋದ್ಯಮ ನಿರ್ದೇಶಕ ರಾಮು, ಪುರಾತತ್ವ ಇಲಾಖೆ ಆಯುಕ್ತ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಗದೀಶ್, ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಜನಾರ್ದನ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT