ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಎಲ್ಲ ಕಾರ್ಯಕರ್ತರೂ ಸಿಎಂ ಅಭ್ಯರ್ಥಿ: ರಣದೀಪ್ ಸಿಂಗ್ ಸುರ್ಜೇವಾಲಾ

Last Updated 1 ಡಿಸೆಂಬರ್ 2022, 10:43 IST
ಅಕ್ಷರ ಗಾತ್ರ

ಕಲಬುರಗಿ: ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯುವುದೇ ಕಾಂಗ್ರೆಸ್ ಆದ್ಯತೆಯಾಗಿದ್ದು, ಪಕ್ಷದ ಎಲ್ಲ ಕಾರ್ಯಕರ್ತರೂ ಮುಖ್ಯಮಂತ್ರಿ ಅಭ್ಯರ್ಥಿಯೇ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಭಿಪ್ರಾಯಪಟ್ಟರು‌.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರಿಗೆ ಸುದ್ದಿಗಾರರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಧ್ಯೆ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಯುತ್ತಿರುವ ಕುರಿತು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯಕ್ಕೆ ಬರಬೇಕಿದ್ದ ಉದ್ಯಮಗಳು ಚೆನ್ನೈ, ಹೈದರಾಬಾದ್ ನತ್ತ ಹೋಗುತ್ತಿವೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಪ್ರತಿ ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಡಿಜಿಪಿ ಹಂತದ ಅಧಿಕಾರಿಯೇ ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಜೈಲಿಗೆ ಹೋಗಿದ್ದಾರೆ. ರಾಜ್ಯದ ಯುವಜನರ ಕೈಗೆ ಕೆಲಸವಿಲ್ಲ' ಎಂದು ಟೀಕಿಸಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಾವು ಪ್ರತಿನಿಧಿಸುವ ಕಲ್ಯಾಣ ಕರ್ನಾಟಕ ಭಾಗದ ಜನತೆಯ ಏಳಿಗೆಗಾಗಿ ಸಂವಿಧಾನ ತಿದ್ದುಪಡಿ ‌ಮೂಲಕ 371 (ಜೆ) ಕಲಂ ಜಾರಿಗೊಳಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೊಡಿಸಿದ್ದಾರೆ. ಇದನ್ನು ಸಹಿಸದ ಬಿಜೆಪಿ ಸರ್ಕಾರ ಇಲ್ಲದ ನೆಪ ಹೇಳಿ ಇಲ್ಲಿನ ಜನರಿಗೆ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದೆ ಎಂದು ಹರಿಹಾಯ್ದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಡ ಮಕ್ಕಳ ಅನುಕೂಲಕ್ಕಾಗಿ ನೀಡುತ್ತಿದ್ದ ಸ್ಕಾಲರ್ ಶಿಪ್ ರದ್ದುಗೊಳಿಸಿ ಭಾರಿ ಅನ್ಯಾಯ ಮಾಡಿದೆ. ಕಾಂಗ್ರೆಸ್ ಎಂದಿಗೂ ಮಕ್ಕಳ‌ ಶಿಕ್ಷಣಕ್ಕೆ ಅಡ್ಡಿ‌ ಮಾಡಿರಲಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರ ಬಂದ ಮೇಲೆ ಬರಿ ಆಶ್ವಾಸನೆ ನೀಡುತ್ತಿದೆ. ಬಿಜೆಪಿ ಬರೀ ಭಾವನೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ನಾವು ಬದುಕಿನ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದರು.

ಅವರಿಗೆ ಕಾರ್ಯಕರ್ತರು ಇಲ್ಲ. ಹೀಗಾಗಿ ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಕಳೆದುಕೊಳ್ಳುವ ಭಯ ಆರಂಭವಾಗಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಗೌರವವಿತ್ತು. ಅದನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.‌ಪಾಟೀಲ, ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ, ಶಾಸಕ ರಾಜಶೇಖರ ಪಾಟೀಲ ಹುಮನಾಬಾದ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT