ಶುಕ್ರವಾರ, ಜುಲೈ 1, 2022
28 °C
ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಬಿ.ಆರ್.ಪಾಟೀಲ ಪತ್ರ

ಕೇಂದ್ರೀಯ ವಿವಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನೇಮಕಾತಿ ಮತ್ತು ಅವ್ಯವಹಾರ ನಡೆಯುತ್ತಿದ್ದು, ಈ ಸಂಬಂಧ ಪೂರ್ಣಪ್ರಮಾಣದ ತನಿಖೆ ನಡೆಸಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಪತ್ರ ಬರೆದಿದ್ದಾರೆ.

‘ವಿಶ್ವವಿದ್ಯಾಲಯ ಸ್ಥಾಪನೆಯಾದಾಗ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಅನುಕೂಲವಾಗುವುದೆಂದು ಭಾವಿಸಿದ್ದೆವು. ಆರಂಭಿಕ ಹಂತದಲ್ಲಿ ಚೆನ್ನಾಗಿ ಕಾರ್ಯನಿರ್ವಹಿಸಿದ ವಿಶ್ವವಿದ್ಯಾಲಯದಲ್ಲಿ ಈಚೆಗೆ ಕಾನೂನುಬಾಹಿರ ನೇಮಕಾತಿ, ಹಣಕಾಸಿನ ವ್ಯವಹಾರ, ಕೋಮು ಗಲಾಟೆ ನಡೆಯುತ್ತಿವೆ. ಶೈಕ್ಷಣಿಕ ಚಟುವಟಿಕೆಗಳಿಗಿಂತ ರಾಜಕಾರಣವೇ ಹೆಚ್ಚು ಕೇಂದ್ರೀತವಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ (25/2019 ಹಾಗೂ 26/2019) ಅಧಿಸೂಚನೆ ಹೊರಡಿಸಲಾಗಿತ್ತು. ಅಭ್ಯರ್ಥಿಗಳ ಆಯ್ಕೆಗೆ ಮೇಲ್ವಿಚಾರಣಾ ಸಮಿತಿಯನ್ನು ಆಯಾ ವಿಭಾಗದ ಮುಖ್ಯಸ್ಥರನ್ನು ಒಳಗೊಂಡು ನೇಮಿಸಬೇಕು. ಆದರೆ, ಇದನ್ನು ಅನುಸರಿಸದೇ ಕೆಲ ನಿವೃತ್ತ  ಪ್ರಾಧ್ಯಾಪಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಅವರನ್ನು ಮೇಲ್ವಿಚಾರಣಾ ಸಮಿತಿಗೆ ನೇಮಕಗೊಳಿಸಲಾಗಿತ್ತು. ಇದು ಸಂಪೂರ್ಣ ಕಾನೂನುಬಾಹಿರ. ಅದರಂತೆ ನೇಮಕಾತಿಯಲ್ಲೂ ಬಹಳಷ್ಟು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ನೇಮಕಾತಿ ಅಧಿಸೂಚನೆ ಸಂಖ್ಯೆ 26/2019ರಂತೆ ರಸಾಯನಶಸ್ತ್ರ ವಿಭಾಗದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿಟ್ಟ ಪ್ರಾಧ್ಯಾಪಕ ಹುದ್ದೆಗೆ ಕಾನೂನುಬಾಹಿರವಾಗಿ ಸಾಮಾನ್ಯ ಜಾತಿಗೆ ಸೇರಿದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ಅದೇ ಅಧಿಸೂಚನೆಯಲ್ಲಿ ಭೌತಶಾಸ್ತ್ರ ವಿಭಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಸಹ ಪ್ರಾಧ್ಯಾಪಕ ಹುದ್ದೆಗೆ ಹಿಂದುಳಿದ ವರ್ಗದ ಜಾತಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ನೇಮಕಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ. 

‘ಅವ್ಯವಹಾರ, ಅಕ್ರಮ ನೇಮಕಾತಿ ಮತ್ತು ಅಧಿಕಾರ ದುರ್ಬಳಕೆಯಿಂದ ವಿಶ್ವವಿದ್ಯಾಲಯದ ಘನತೆ-ಗೌರವಕ್ಕೆ ಕುಂದು ಬಂದಿದೆ. ವಿಶ್ವವಿದ್ಯಾಲಯದ ಕುಲಾಧಿಪತಿಯಾದ ತಾವು ಈ ಕೂಡಲೇ ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು