ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್–ಶ್ರೀರಂಗಪಟ್ಟಣ ಚತುಷ್ಪಥ ರಸ್ತೆ

ಅಧಿಕಾರಿಗಳ ಸಭೆ; ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ
Last Updated 4 ಫೆಬ್ರುವರಿ 2019, 14:16 IST
ಅಕ್ಷರ ಗಾತ್ರ

ಕಲಬುರ್ಗಿ: ‘ಬೀದರ್–ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆದಿದ್ದು, ಇದಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ’ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ನಗರದ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಸೋಮವಾರ ಕಲಬುರ್ಗಿ ಲೋಕೋಪಯೋಗಿ ವೃತ್ತದ ಕಲಬುರ್ಗಿ, ಬೀದರ್, ಸೇಡಂ ಮತ್ತು ಯಾದಗಿರಿ ಲೋಕೋಪಯೋಗಿ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬೀದರ್–ಶ್ರೀರಂಗಪಟ್ಟಣ ಹೆದ್ದಾರಿಯು 1994ರಲ್ಲಿ ನಿರ್ಮಾಣವಾಗಿದೆ. ಶಹಾಪುರ, ಸುರಪುರ ಬಳಿ ರಸ್ತೆ ಕಿರಿದಾಗಿರುವುದು ಗಮನಕ್ಕೆ ಬಂದಿದೆ. ಈ ಮಾರ್ಗವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಕೇಂದ್ರ ಅನುಮತಿ ನೀಡಿದ ಬಳಿಕ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು.

4,902 ಕಾಮಗಾರಿ: ‘2018–19ನೇ ಸಾಲಿನಲ್ಲಿ ₹1,981 ಕೋಟಿ ವೆಚ್ಚದಲ್ಲಿ 4,902 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ 4,897 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. 1,051 ಕಾಮಗಾರಿ ಪೂರ್ಣಗೊಂಡಿದ್ದು, 3,422 ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ವರ್ಷದ ಕಾಮಗಾರಿಗಳನ್ನು ಫೆಬ್ರುವರಿ 20ರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ವಾಗ್ಧರಿ–ರಿಬ್ಬನ್‌ಪಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಧಿಕಾರಿಯೊಬ್ಬರು, ‘ಈ ರಸ್ತೆಯನ್ನು 30 ವರ್ಷಕ್ಕೆ ಗುತ್ತಿಗೆ ನೀಡಲಾಗಿದೆ. ಈಗ 8 ವರ್ಷಗಳಾಗಿವೆ. ಅವಧಿ ಪೂರ್ಣಕ್ಕೂ ಮುಂಚೆ ಚತುಷ್ಪಥ ರಸ್ತೆ ಮಾಡಲು ಅವಕಾಶವಿಲ್ಲ. ಒಂದೊಮ್ಮೆ ಮಾಡಬೇಕಾದರೆ ರಾಜ್ಯ ಸರ್ಕಾರ ಅನುದಾನ ನೀಡಬೇಕಾಗುತ್ತದೆ’ ಎಂದು ಹೇಳಿದರು.

‘ಕಲಬುರ್ಗಿ ನಗರದಲ್ಲಿ ಎರಡನೇ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿಲ್ಲ. ಅದು ಸಿದ್ಧವಾದ ಬಳಿಕ ಅನುದಾನ ಬಿಡುಗಡೆ ಮಾಡಲಾಗುವುದು. ಜಿಲ್ಲಾ ಮುಖ್ಯ ರಸ್ತೆಗಳ ದುರಸ್ತಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಕಾಮಗಾರಿಗಳು ಕಳಪೆಯಾಗಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದರು.

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾರಾಯಣರಾವ್‌, ಶಾಸಕರಾದ ನಾಗನಗೌಡ ಕಂದಕೂರ, ಎಂ.ವೈ.ಪಾಟೀಲ, ಸುಭಾಷ ಆರ್.ಗುತ್ತೇದಾರ, ಕನ್ನೀಜ್ ಫಾತಿಮಾ, ಬಸವರಾಜ ಮತ್ತಿಮೂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT