ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಬೆಂಬಲದಿಂದ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ- ಎನ್. ರವಿಕುಮಾರ್

Last Updated 7 ಸೆಪ್ಟೆಂಬರ್ 2021, 4:12 IST
ಅಕ್ಷರ ಗಾತ್ರ

ಕಲಬುರ್ಗಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 23 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದು, ಜೆಡಿಎಸ್‌ ಬೆಂಬಲ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಎನ್‌.ರವಿಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘30ಕ್ಕಿಂತಲೂ ಅಧಿಕ ಸೀಟುಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇತ್ತು. ಆದರೆ, ಶ್ರಾವಣ ಶುಕ್ರವಾರದಂದು ಚುನಾವಣೆ ನಡೆದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತಗಟ್ಟೆಯತ್ತ ಬರಲಿಲ್ಲ. ಮತದಾನ ಪ್ರಮಾಣ ಶೇ 50 ದಾಟಿದ್ದರೂ ಪಕ್ಷದ ಐದಾರು ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಟಿಕೆಟ್‌ ಹಂಚಿಕೆಯಲ್ಲಿ ಹೆಚ್ಚು ಕಡಿಮೆಯಾಗಿ ಕೆಲ ಅಭ್ಯರ್ಥಿಗಳು ಸೋತರು ಎಂಬ ಬಗೆಗಿನ ಚರ್ಚೆ ಈಗ ಅಪ್ರಸ್ತುತ’ ಎಂದರು.

‘23 ಬಿಜೆಪಿ ಸ್ಥಾನಗಳ ಜೊತೆಗೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರ ಆರು ಮತಗಳು ಬಿಜೆಪಿಗೆ ದೊರೆಯಲಿವೆ. ಜೆಡಿಎಸ್‌ನ ಮೂವರು ಸದಸ್ಯರು ಹಾಗೂ ಪಕ್ಷೇತರ ಅಭ್ಯರ್ಥಿಯ ಬೆಂಬಲ ಪಕ್ಷಕ್ಕೆ ಸಿಗಲಿದ್ದು, ನಿಸ್ಸಂದೇಹಕವಾಗಿ ಬಿಜೆಪಿ ಸದಸ್ಯರೇ ಮೇಯರ್‌ ಆಗಿ ಆಯ್ಕೆಯಾಗಲಿದ್ದು, ಸ್ಮಾರ್ಟ್‌ ಸಿಟಿ ಸೇರಿದಂತೆ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದರು.

‘ಮಲ್ಲಿಕಾರ್ಜುನ ಖರ್ಗೆ ಅವರಂತಹ ರಾಷ್ಟ್ರೀಯ ನಾಯಕರು, ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಕಾರ್ಯಕ್ಷೇತ್ರವಾಗಿದ್ದ ಕಲಬುರ್ಗಿಯಲ್ಲಿ ಬಿಜೆಪಿ ಪಾಲಿಕೆಯಲ್ಲಿ ಆಡಳಿತ ನಡೆಸಲಿದೆ. ಅಷ್ಟೇ ಅಲ್ಲದೇ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ವ್ಯಾಪ್ತಿಯ ವಾಡಿ ಪುರಸಭೆಗೆ ನಡೆದ ಉಪಚುನಾವಣೆಯಲ್ಲಿ ಎರಡೂ ಸ್ಥಾನಗಳು ಬಿಜೆಪಿ ಪಾಲಾಗಿವೆ. ನಮ್ಮ ಪ್ರತಿನಿಧಿಗಳೇ ಇಲ್ಲದ ದೊಡ್ಡಪುಳ್ಳಾಪುರ ನಗರಸಭೆಗೆ ನಡೆದ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರಲಿದ್ದೇವೆ’ ಎಂದರು.

ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ‘ಕಲಬುರ್ಗಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಉತ್ತಮ ಸಾಧನೆ ತೋರಿಸಿದ್ದು, ನಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ. ಹಲವು ಕಡೆಗಳಲ್ಲಿ ಅತಿ ಕಡಿಮೆ ಅಂತರದಲ್ಲಿ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ’ ಎಂದು ಹೇಳಿದರು.

ಶಾಸಕ ಬಸವರಾಜ ಮತ್ತಿಮೂಡ, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ್ ನಮೋಶಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT