ಶಹಾಬಾದ್: ನಗರ ಹೊರವಲಯದ ಇಎಸ್‌ಐ ಆಸ್ಪತ್ರೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 150ರ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಹಿನ್ನೆಲೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆ ಮಳೆಯಿಂದಾಗಿ ಸಂಪೂರ್ಣವಾಗಿ ಹದಗೆಟ್ಟು ಗುಂಡಿಗಳು ನಿರ್ಮಾಣಗೊಂಡಿದ್ದು, ಲಾರಿ, ಬಸ್‌ಗಳು ಸಿಲುಕಿಕೊಂಡು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಶಹಾಬಾದ್ ಇಎಸ್ಐ ಆಸ್ಪತ್ರೆ ಎದುರು ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಸಾಗಿದೆ. ಇದರಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿದ್ದಾರೆ. ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ನಿಭಾಯಿಸಲು ಹರಸಾಹಸ ಪಡುವಂತಾಗಿದೆ.
ಶಂಕರವಾಡಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಅದರೊಂದಿಗೆ ಇಎಸ್ಐ ಆಸ್ಪತ್ರೆ ಎದುರಿನ ಸೇತುವೆ ಕಾಮಗಾರಿಯೂ ಪೂರ್ಣವಾಗಬೇಕಿತ್ತು. ಆದರೆ ಅಧಿಕಾರಿಗಳು ನಿರ್ಲಕ್ಷ್ಯದಿಂದಾಗಿ ಕಾಮಗಾರಿ ವಿಳಂಬವಾಗಿದ್ದು, ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಸೇತುವೆ ಕಾಮಗಾರಿಗಾಗಿ ಇಎಸ್ಐ ಆಸ್ಪತ್ರೆ ಎದುರು ಲಿಂಕ್ ರಸ್ತೆಯನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿತ್ತು. ಅದು ಈಗ ಸಂಪೂರ್ಣವಾಗಿ ಕೆಸರುಗದ್ದೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಈ ಬಗ್ಗೆ ಗಮನಹರಿಸಿ, ಬೇಗನೆ ಸೇತುವೆ ಕಾಮಗಾರಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವಾಡಿ ಕ್ರಾಸ್‌ನಿಂದ ಶಂಕರವಾಡಿವರೆಗೆ ನೂರಾರು ಸಂಖ್ಯೆಯಲ್ಲಿ ವಾಹನಗಳು ಗಂಟೆಗಟ್ಟಲೇ ನಿಲ್ಲುವಂತಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಗಂಭೀರವಾದ ಸಮಸ್ಯೆಗಳು ಉಂಟಾಗುತ್ತಿವೆ.ಭೀಮಯ್ಯ ಗುತ್ತೇದಾರ, ಆರ್ಯ–ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ
ಸೇತುವೆ ಕಾಮಗಾರಿ ವಿಳಂಬದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.ಜಗದೀಶ ಚೌರ, ತಹಶೀಲ್ದಾರ್
ಶಹಾಬಾದ್ ಇಎಸ್ಐ ಆಸ್ಪತ್ರೆ ಎದುರಿನ ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಜನರ ಬಗ್ಗೆ ಕಾಳಜಿ ವಹಿಸಿ ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು.ಕನಕಪ್ಪ ದಂಡುಗುಳ್ಕರ, ವಾಡಿ–ಶಹಾಬಾದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.