ಕಲಬುರಗಿ: ‘ಮಕ್ಕಳ ಮೇಲಿನ ದೌರ್ಜನ್ಯ ತಡೆಗಾಗಿ ಅವರಲ್ಲಿ ಅರಿವು ಮೂಡಿಸಲು ವಿಶೇಷವಾಗಿ ಮಿಷನ್ ಸುರಕ್ಷಾ ಅಭಿಯಾನ ಹಮ್ಮಿಕೊಳ್ಳಾಗಿದೆ’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘3ನೇ ಹಂತದ ಮಿಷನ್ ಸುರಕ್ಷಾ ಕಾರ್ಯಕ್ರಮದಡಿ ತರಬೇತಿ ಪಡೆದ ಪಿಡಿಒಗಳು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಮಟ್ಟದಲ್ಲಿ ನಡೆಯುವ ಎಲ್ಲ ಗ್ರಾಮಸಭೆ, ವಿಶೇಷ ಗ್ರಾಮ ಸಭೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಈ ವಿಷಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಚೆನ್ನಾಗಿ ತರಬೇತಿ ನೀಡಿದ ಐವರು ತರಬೇತುದಾರರನ್ನು ಗುರುತಿಸಿ ಅವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಗುವುದು’ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಮಾತನಾಡಿ, ಬಾಲ್ಯವಿವಾಹ ಹಾಗೂ ಬಾಲಗರ್ಭಿಣಿ ಪ್ರಕರಣಗಳನ್ನು ದಾಖಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸೈಬರ್ ಕ್ರೈಂ ವಿಭಾಗದ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡಂತೆ ತರಬೇತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಮಾತನಾಡಿ, ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಪ್ರಕರಣಗಳನ್ನು ದಾಖಲಿಸಲು ಅಧಿಕಾರಿಗಳೊಂದಿಗೆ ಪೊಲೀಸ್ ಇಲಾಖೆ ಸಹಕರಿಸುವುದಾಗಿ ತಿಳಿಸಿದರು. ಹಾಗೂ ಮಕ್ಕಳಸ್ನೇಹಿ ಕಾರ್ನರ್‌ನ್ನು ಎರಡು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಾಗಿ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ರಾಜಕುಮಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೂರ್ಯಕಾಂತ ಮದಾನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ ಹಾಜರಿದ್ದರು.