ಕುಷ್ಟಗಿ: ‘ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ದೊರೆತರೆ ಭವಿಷ್ಯದಲ್ಲಿ ಅವರು ಜವಾಬ್ದಾರಿಯುತ ಪ್ರಜೆಗಳಾಗಿ ದೇಶಕ್ಕೆ ಉತ್ತಮ ಕೊಡುಗೆ ನೀಡಬಲ್ಲರು’ ಎಂದು ಇಲ್ಲಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿದೇವಿ ಹೇಳಿದರು.
ತಾಲ್ಲೂಕಿನ ನಿಡಶೇಸಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳ ಕುರಿತ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣವೇ ಮುಖ್ಯ ಗುರಿಯಾಗಿರಬೇಕು. ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಮತ್ತು ಅವರ ಹಕ್ಕುಗಳಿಗೆ ಚ್ಯುತಿ ಬಾರದ ಹಾಗೆ ಪಾಲಕರು ಹಾಗೂ ಸಮುದಾಯ ಮುತುವರ್ಜಿವಹಿಸಬೇಕು. ಅಲ್ಲದೆ ಮಕ್ಕಳು ದುಶ್ಚಟಗಳಿಂದ ದೂರ ಇರುವಂತೆಯೂ ನಿಗಾವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮೊರಾರ್ಜಿ ಶಾಲೆಯ ಪ್ರಾಚಾರ್ಯ ಶ್ರೀಕಾಂತ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಚ್.ಗೋಡಿ ಹಾಗೂ ಸಬ್ ಇನ್‌ಸ್ಪೆಕ್ಟರ್ ಮಾನಪ್ಪ ಮಾತನಾಡಿದರು.
ವಕೀಲ ರವಿ ಮೇಟಿ ಅವರು ಮಕ್ಕಳ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಕೀಲರು, ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.