ಶನಿವಾರ, ಸೆಪ್ಟೆಂಬರ್ 26, 2020
26 °C

ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಇಲ್ಲಿ ಚಾಲನೆ ನೀಡಿದರು.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಂದ ಅವರು, ನಗರದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ವೃತ್ತದಲ್ಲಿರುವ ಸರ್ದಾರ್‌ ವಲ್ಲಭಭಾಯ್ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ನಂತರ ಪೊಲೀಸ್‌ ಡಿಎಆರ್‌ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ  ಬಸವರಾಜ ಪಾಟೀಲ ಸೇಡಂ, ಸಂಸದ ಡಾ.ಉಮೇಶ ಜಾಧವ, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ ಮತ್ತಿಮೂಡ ಡಾ.ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ ಹಾಗೂ ಇತರ ಪ್ರತಿನಿಧಿಗಳು ಇದ್ದರು.

ಇದನ್ನೂ ಓದಿ: 

ಉತ್ಸವದ ಬಗ್ಗೆ: ‘ಹೈದರಾಬಾದ್‌ ಕರ್ನಾಟಕ’ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ರಾಜ್ಯ ಸರ್ಕಾರ ಮರು ನಾಮಕರಣ ಮಾಡಿ ಒಂದು ವರ್ಷವಾಗಿದೆ. ‘ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನ’ವನ್ನು ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನಾಗಿ ಆಚರಿಸಲಾಗುತ್ತಿದೆ.  

ಬೀದರ್‌ ಮತ್ತು ಅವಿಭಜಿತ ಕಲಬುರ್ಗಿ, ರಾಯಚೂರು ಜಿಲ್ಲೆಗಳು ಹಿಂದೆ ಹೈದರಾಬಾದ್‌ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಹೈದರಾಬಾದ್‌ ನಿಜಾಮ ತನ್ನ ಸಂಸ್ಥಾವನ್ನು  ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಒಪ್ಪದ ಕಾರಣ ಹೈದರಾಬಾದ್‌ ಕರ್ನಾಟಕದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲೇ ಇಲ್ಲ. ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಬಿಗಿನಿಲುವಿನಿಂದಾಗಿ ಹೈದರಾಬಾದ್‌ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸೆ.17ರಂದು. ಹೀಗಾಗಿ ಪ್ರತಿ ವರ್ಷವೂ ಸೆಪ್ಟೆಂಬರ್‌ 17ನ್ನು ಈ ಜಿಲ್ಲೆಗಳಲ್ಲಿ ‘ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನ’ ಎಂದು ಆಚರಿಸಲಾಗುತ್ತಿತ್ತು.

ಹೈದರಾಬಾದ್‌ ಕರ್ನಾಟಕದ ಹೆಸರಿನಲ್ಲಿಯೇ ದಾಸ್ಯ ಇದೆ ಹೀಗಾಗಿ ಶರಣರ ಈ ನಾಡಿಗೆ ‘ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಬೇಕು ಎಂಬ ಬೇಡಿಕೆ ಇತ್ತು. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆಯೇ 2019ರ ಸೆಪ್ಟೆಂಬರ್ 17ರಂದು ಈ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ಹೆಸರಿಟ್ಟರು. ಇದು ಕಲ್ಯಾಣ ಕರ್ನಾಟಕ ಉತ್ಸವದ ಎರಡನೇ ದಿನಾಚರಣೆ.

ಪಟೇಲ್‌ ಪ್ರತಿಮೆ: ಹೈದರಾಬಾದ್‌ ನಿಜಾಮ ಸಂಸ್ಥಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಿ, ಈ ಸಂಸ್ಥಾನ ಸ್ವತಂತ್ರ ಭಾರತದ ಒಕ್ಕೂಟದಲ್ಲಿ ವಿಲೀನವಾಗುವಂತೆ ಮಾಡುವಲ್ಲಿ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಕಾರ್ಯ ಪ್ರಮುಖವಾಗಿತ್ತು. ಹೈದರಾಬಾದ್‌ ಕರ್ನಾಟಕಕ್ಕೆ ವಿಮೋಚನೆ ದೊರಕಿಸಿಕೊಟ್ಟಿದ್ದಕ್ಕಾಗಿ ಕಲಬುರ್ಗಿಯಲ್ಲಿ ಪಟೇಲ್‌ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮಕ್ಕೂ ಮುನ್ನ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವುದು ಸಂಪ್ರದಾಯವಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು