ಬುಧವಾರ, ಜೂನ್ 23, 2021
28 °C
ರಾಜ್ಯ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ; ಕೋವಿಡ್ ಭ್ರಷ್ಟಾಚಾರದ ತನಿಖೆಗೆ ಒತ್ತಾಯ

ಕಲಬುರಗಿ: ಕಾಂಗ್ರೆಸ್‌ನಿಂದ ಜನಧ್ವನಿ ಸತ್ಯಾಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಹಾಗೂ ಕೋವಿಡ್‌ ಸಂಬಂಧಿ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಐವಾನ್ ಇ ಶಾಹಿ ರಸ್ತೆಯ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಕರೆಯ ಮೇರೆಗೆ ಎಲ್ಲ ಜಿಲ್ಲೆಗಳಲ್ಲಿ ‘ಜನಧ್ವನಿ’ ಹೆಸರಿನಲ್ಲಿ ಪ್ರತಿಭಟನೆಗಳನ್ನು ಆಯೋಜಿಸಲಾಗಿತ್ತು.

ರೈತರು ಮತ್ತು ಕಾರ್ಮಿಕರಿಗೆ ಮಾರಕವಾಗಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಕ್ಷಣವೇ ಹಿಂಪಡೆಯಬೇಕು. ಕೋವಿಡ್ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಒಪ್ಪಿಸಲು ಸರ್ಕಾರಕ್ಕೆ ಸೂಚಿಸಬೇಕೆಂದು ರಾಜ್ಯಪಾಲರಿಗೆ ಒತ್ತಾಯಿಸಲಾಯಿತು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಮುಖಂಡರು, ಕೋವಿಡ್ ಸೋಂಕಿನಿಂದ ಇಡೀ ಜಗತ್ತು ಹೋರಾಟ ನಡೆಸುತ್ತಿದೆ. ಜನರು ಜೀವನ್ಮರಣದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಮಾತ್ರ ಸಂಕಷ್ಟದ ಕಾಲದಲ್ಲೂ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೋವಿಡ್ ನೆಪದಲ್ಲಿ ₹ 2 ಸಾವಿರ ಕೋಟಿ ಲೂಟಿ ಆಗಿದೆ’ ಎಂದು ಆರೋಪಿಸಿದರು.

‘ರೈತರ ಹಿತಕಾಯುವ ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದು, ಕಾಯ್ದೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿದೆ. ದೊಡ್ಡ ಕಾರ್ಪೊರೇಟ್ ಕಂಪನಿಗಳು, ಕೃಷಿರಲ್ಲದ ಶ್ರೀಮಂತರು ರೈತರ ಕೃಷಿ ಭೂಮಿಯನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಮತ್ತೆ ಜಮೀನ್ದಾರ ಪದ್ಧತಿ ಜಾರಿಗೆ ಸರ್ಕಾರವೇ ಅನುವು ಮಾಡಿಕೊಡಲು ಹೊರಟಿದೆ ಎಂದು ಟೀಕಿಸಿದರು.

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆ (ಎಪಿಎಂಸಿ)ಗೆ ತಿದ್ದುಪಡಿ ಮಾಡಿರುವ ಸರ್ಕಾರ, ವ್ಯಾಪಾರಿಗಳು, ಕಂಪನಿಗಳಿಗೆ ನೇರವಾಗಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಅನುಮತಿ ನೀಡಿ ರೈತರನ್ನು ಸುಲಿಗೆ ಮಾಡುವ ಅವಕಾಶ ಕಲ್ಪಿಸಿದೆ. ಕೈಗಾರಿಕೆ ಮತ್ತು ಕಾರ್ಮಿಕರ ಕಾಯ್ದೆಯ ತಿದ್ದುಪಡಿಯಿಂದ ಕಾರ್ಮಿಕರನ್ನು ಸಂಕಷ್ಟಕ್ಕೆ ಸಿಲುಕಿಸಲು ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ಹಿಂದೆ 300ಕ್ಕಿಂತ ಹೆಚ್ಚು ಕಾರ್ಮಿಕರು ಹೊಂದಿರುವ ಯಾವುದೇ ಕಾರ್ಮಿಕರನ್ನು ಮುಚ್ಚಬೇಕಾದರೆ ಸರ್ಕಾರದ ಅನುಮತಿ ಬೇಕಿತ್ತು. ಈಗ ತಿದ್ದುಪಡಿ ಮಾಡಿ 300ರ ಬದಲು ಕೇವಲ 100ಕ್ಕೆ ಇಳಿಸಲಾಗಿದೆ. ಇದರಿಂದ ಲಕ್ಷಾಂತರ ಕಾರ್ಮಿಕರು ಬೀದಿ ಬೀಳುತ್ತಾರೆ. ಹೀಗಾಗಿ ಇಂತಹ ಕಾಯ್ದೆಗಳ ತಿದ್ದುಪಡಿಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕಳೆದ ವರ್ಷದಿಂದ ರಾಜ್ಯ ಅತಿವೃಷ್ಟಿಗೆ ತುತ್ತಾಗುತ್ತಿದೆ. ಆದರೂ, ಪ್ರವಾಹ ಪೀಡಿತರಿಗೆ ಸರಿಯಾದ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಕಳೆದ ಬಾರಿ ಸಂತ್ರಸ್ತರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಈ ವರ್ಷವೂ ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ಜನರು, ರೈತರ ನೆರವಿಗೆ ಧಾವಿಸುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಸುರಿಯುತ್ತಿರುವ ಮಳೆಯ ಮಧ್ಯೆಯೂ ಪ್ರತಿಭಟನೆ ಮುಂದುವರಿದಿತ್ತು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಪಂಚಾಯಿತಿ ಸದಸ್ಯ ದಿಲೀಪ್ ಆರ್ ಪಾಟೀಲ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಠೋಡ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಝಳಕಿ,
ಚಂದ್ರಕಲಾ ಪರಮೇಶ್ವರ್, ಮುಖಂಡರಾದ ಗೋನಾಯಕ, ಕಿಶೋರ ಗಾಯಕವಾಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು