ಸೋಮವಾರ, ಮೇ 23, 2022
24 °C
ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ

‘ಜನರ ಪಿಕ್ ಪಾಕೆಟ್ ಮಾಡುವ ಬಿಜೆಪಿ ಸರ್ಕಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಐದು ರಾಜ್ಯಗಳ ಚುನಾವಣೆ ಮುಗಿದ ಬಳಿಕ ಕೇಂದ್ರದ ಬಿಜೆಪಿ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಪಿಕ್ ಪಾಕೆಟ್ ಮಾಡುತ್ತಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಟೀಕಿಸಿದರು.

ನಗರದಲ್ಲಿ ಶನಿವಾರ ಯುವ ಕಾಂಗ್ರೆಸ್ ಆಯೋಜಿಸಿದ್ದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಾಮಾನ್ಯ ಜನರ ಲೂಟಿ ಮಾಡುತ್ತಿದೆ. ಇಂತಹ ಸುಳ್ಳು ಸರ್ಕಾರವನ್ನು ಸೋಲಿಸಬೇಕು. ತೈಲ ಬೆಲೆ ಹೆಚ್ಚಳ, ಕಡಿಮೆಯಾಗುವುದು ತಮ್ಮ ಕೈಲಿಲ್ಲ ಎನ್ನವ ಸರ್ಕಾರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾದರೂ ಚುನಾವಣೆ ಮುಗಿಯುವವರೆಗೂ ಸುಮ್ಮನಿದ್ದು, ಫಲಿತಾಂಶ ಬಂದ ಕೆಲವೇ ದಿನಗಳಲ್ಲಿ ನಿತ್ಯ ಏರಿಸುತ್ತಿರುವುದಕ್ಕೆ ಕಾರಣವೇನು? ಅಂತರರಾಷ್ಟ್ರೀಯ ಮಟ್ಟದಲ್ಲಿ ಕಡಿಮೆಯಾದಾಗ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದೇ ವಂಚನೆ ಮಾಡಲಾಗಿದೆ’ ಎಂದು ಹರಿಹಾಯ್ದರು.

‘ಹಲಾಲ್ ಕಟ್, ಹಿಜಾಬ್, ಆಜಾನ್‌ನಂತಹ ವಿವಾದಗಳು ನಿನ್ನೆ ಮೊನ್ನೆ ಶುರುವಾಗಿರುವುದಲ್ಲ. ಬಿಜೆಪಿ ಕೋಮುಭಾವನೆ ಯಾಕೆ ಮೂಡಿಸುತ್ತಿದೆ ಎನ್ನುವುದರ ಬಗ್ಗೆ ಜನ ಆಲೋಚಿಸಬೇಕಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನರೇಂದ್ರ ಮೋದಿ ಬೆಲೆ ಏರಿಕೆ ಬಗ್ಗೆ ಒಮ್ಮೆಯಾದರೂ ಮಾತನಾಡಿದ್ದಾರಾ’ ಎಂದು ಪ್ರಶ್ನಿಸಿದರು.

‘ಬಿಜೆಪಿಯವರ ಈ ಕೋಮು ವಿಭಜಕ ಹುನ್ನಾರವನ್ನು ಸೋಲಿಸಬೇಕಿದ್ದು, ನಾವೆಲ್ಲಾ ಭಾರತೀಯರು, ನಾವೆಲ್ಲಾ ಒಂದೇ ಎಂಬ ಭಾವವನ್ನು ಮೂಡಿಸಿಕೊಳ್ಳಬೇಕಿದೆ’ ಎಂದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿರುವುದರ ಬಗ್ಗೆ ಜನಜಾಗೃತಿ ಮೂಡಿಸಲು ಪ್ರತಿ ಜಿಲ್ಲೆಗೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ’ ಎಂದು ಹೇಳಿದರು.

ಇದಕ್ಕೂ ಮುನ್ನ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ತೆರೆದ ಜೀಪಿನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿದರು. ಬೃಹತ್ ಮಾಲೆ ಹಾಕಿ ಸನ್ಮಾನಿಸಿದರು.

ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಈರಣ್ಣ ಝಳಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಠೋಡ ಇತರರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.